ಪ್ರಧಾನಿ ಮೋದಿ ವಿರುದ್ಧ ಟ್ವೀಟ್ | ಜಿಗ್ನೇಶ್ ಮೇವಾನಿಗೆ ಅಸ್ಸಾಮ್ ಕೋರ್ಟ್ ಜಾಮೀನು

Prasthutha|

ಗುವಾಹಟಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಗುಜರಾತ್ ಶಾಸಕ, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಅವರಿಗೆ ಅಸ್ಸಾಮ್ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಗೋಡ್ಸೆಯನ್ನು ದೇವರೆಂದು ಪರಿಗಣಿಸಿದ್ದಾರೆ ಎಂದು ಬಣ್ಣಿಸಿ ಟ್ವೀಟ್ ಮಾಡಿದ್ದಕ್ಕಾಗಿ ಮೇವಾನಿ ಅವರನ್ನು ಕಳೆದ ವಾರ ಅಸ್ಸಾಂ ಪೊಲೀಸರು ಬಂಧಿಸಿದ್ದರು. ಮೇವಾನಿ ಅವರ ಮೂರು ದಿನಗಳ ಪೊಲೀಸ್ ಕಸ್ಟಡಿ ಭಾನುವಾರ ಕೊನೆಗೊಂಡಿದ್ದು, ನಂತರ ಅವರನ್ನು ತಡರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ನ್ಯಾಯಾಲಯ ಅವರನ್ನು ಒಂದು ದಿನದ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಪ್ರಧಾನಿ ಮೋದಿ ವಿರುದ್ಧ ಟ್ವೀಟ್ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಸ್ಥಳೀಯ ನಾಯಕ ಕೊಕ್ರಜಾರ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನ ಅನ್ವಯ ಜಿಗ್ನೇಶ್ ಮೇವಾನಿ ವಿರುದ್ಧ ಐಪಿಸಿ ಮತ್ತು ಐಟಿ ಕಾಯ್ದೆಯ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

- Advertisement -

ಇದಕ್ಕೆ ಸಂಬಂಧಿಸಿದಂತೆ ಮೇವಾನಿ ಅವರನ್ನು ಗುಜರಾತಿನ ಪಾಲನ್ ಪುರ್ ಪಟ್ಟಣದಿಂದ ಬಂಧಿಸಲಾಗಿತ್ತು. ಮೇವಾನಿ ಬಂಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಅಸ್ಸಾಂನಲ್ಲಿ ಪ್ರತಿಭಟನೆಗಳನ್ನು ನಡೆಸಿದ್ದವು.

ಬಳಿಕ ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿ ಜಿಗ್ನೇಶ್’ರನ್ನು ಪೊಲೀಸರು ಬಂಧಿಸಿದ್ದಾರೆ.

Join Whatsapp