ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ ಸಿಎಂ
ಬೆಂಗಳೂರು: 68ನೇ ಕನ್ನಡ ರಾಜ್ಯೋತ್ಸವವನ್ನು ರಾಜ್ಯಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಸೃಷ್ಟಿಸಬೇಕು, ಸಂಭ್ರಮಿಸಬೇಕು ಎಂದು ಸಿಎಂ ಕರೆ ನೀಡಿದ್ದಾರೆ.
ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ ಸಿಎಂ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಿಸಿದ್ದಾರೆ.
ಮುಖ್ಯಮಂತ್ರಿಗಳ ಭಾಷಣದಲ್ಲಿ ಕನ್ನಡದ ಅಸ್ಮಿತೆಗೆ ಧಕ್ಕೆಯಾಗುವುದರ ಬಗ್ಗೆ ವಿಷಾದ ವ್ಯಕ್ತವಸಯಿತು. ಕನ್ನಡ ನೆಲದಲ್ಲಿದ್ದೂ ಕನ್ನಡ ಮಾತನಾಡದವರು ಹಲವು ಭಾಗಗಳಲ್ಲಿ ಇದ್ದಾರೆ. ನಮ್ಮ ಆಡಳಿತ ಭಾಷೆ ಕನ್ನಡ. ಆದ್ದರಿಂದ ನಾವು ಕನ್ನಡದಲ್ಲೇ ವ್ಯವಹರಿಸಬೇಕು. ಪ್ರತಿಯೊಬ್ಬರ, ಪ್ರತಿಯೊಂದು ಭಾಷೆಗೂ ನಾವು ಗೌರವ ಕೊಡಬೇಕು. ಆದರೆ ನಮ್ಮ ನಾಡಿನಲ್ಲಿ ವ್ಯವಹರಿಸುವಾಗ, ಆಡಳಿತದಲ್ಲಿ ಕನ್ನಡ ಬಳಕೆ ಆಗಬೇಕು. ಇದನ್ನು ಪ್ರತಿಯೊಬ್ಬ ಅಧಿಕಾರಿಯೂ ಚಾಚೂ ತಪ್ಪದೆ ಪಾಲಿಸಬೇಕು ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರದಿಂದ ಕನ್ನಡಕ್ಕಾಗುವ ಧಕ್ಕೆಯ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಸಿಎಂ, ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿಯಲ್ಲಿ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದನ್ನು ಒಪ್ಪಲು ಸಾಧ್ಯವಿಲ್ಲ. ಕನ್ನಡದಲ್ಲೂ ಪ್ರವೇಶ ಪರೀಕ್ಷೆ ನಡೆಸಲು ಈ ಹಿಂದೆಯೂ ಒತ್ತಾಯಿಸಿದ್ದೆ. ಅಗತ್ಯಬಿದ್ದರೆ ಮತ್ತೆ ಕೇಂದ್ರಕ್ಕೆ ಪತ್ರ ಬರೆದು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.
ಮುಂದುವರೆದು ಮಾತಾಡಿದ ಸಿಎಂ, ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಇದು ಸರಿಯಲ್ಲ. ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಮಾಧ್ಯಮದಲ್ಲಿ ಕಲಿತವರು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಉನ್ನತ ಮಟ್ಟದ ಸಾಧನೆ ಮಾಡಿದ್ದಾರೆ ಎಂದು ಉದಾಹರಣೆ ನೀಡಿದರು. ಗುಣಮಟ್ಟದ ಶಿಕ್ಷಣ ಮತ್ತು ಉತ್ತಮ ಕಲಿಕಾ ವಾತಾವರಣ ಹಾಗೂ ಶಾಲೆಗಳ ಗುಣಮಟ್ಟ ಹೆಚ್ಚಿಸುವುದು , ಅಗತ್ಯ ಎಲ್ಲಾ ಸವಲತ್ತುಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆ ಎಂದರು.
ಮುಗ್ಧ ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯವಾದರೂ ಅವರಿಗೆ ತಿಳಿದಿರಲಿ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕವಾಗಿದೆ ಎಂದರು.
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತಾಡಿ, ಕನ್ನಡ ರಾಜ್ಯೋತ್ಸವದ 50 ರ ಸಂಭ್ರಮವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ಎಂದು ಘೋಷಣೆ ಮಾಡಲಾಗಿದೆ. ನಮ್ಮ ಇಲಾಖೆಯಿಂದ 13,000 ಶಿಕ್ಷಕರ ನೇಮಕ ಮಾಡಲಾಗಿದೆ. ಇನ್ನು ಅಗತ್ಯ ಇರುವ ಶಿಕ್ಷಕರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.
8,0311 ಹೊಸ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ. 600 ಕನ್ನಡ ಪಬ್ಲಿಕ್ ಶಾಲೆ ಸ್ಥಾಪನೆಯ ಉದ್ದೇಶ ಹೊಂದಲಾಗಿದೆ. ಸಸ್ಯ ಶ್ಯಾಮಲಾ ಕಾರ್ಯಕ್ರಮದ ಮೂಲಕ 50 ಸಾವಿರ ಸಸಿಗಳನ್ನು ನೆಡಲಾಗುವುದು. ಮಕ್ಕಳ ಬ್ಯಾಗ್ ಹೊರೆಯನ್ನು ಶೇ 50 ರಷ್ಟು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.