ಎಂಇಎಸ್ ಶಿವಸೇನೆ ನಿಷೇಧಕ್ಕೆ ಆಗ್ರಹಿಸಿ ಕರವೇ ರಾಜಭವನ ಮುತ್ತಿಗೆ

Prasthutha|

ಬೆಂಗಳೂರು: ಎಂಇಎಸ್ ಹಾಗೂ ಶಿವಸೇನೆ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಗುರುವಾರ ಮೆರವಣಿಗೆ ಮೂಲಕ ರಾಜಭವನ ಮುತ್ತಿಗೆ ಹಾಕುವ ಪ್ರತಿಭಟನೆ ನಡೆಸಿದರು.

- Advertisement -

ನಗರದ ಸರ್ ಪುಟ್ಟಣ್ಣಚೆಟ್ಟಿ ಟೌನ್ ಹಾಲ್ ಮುಂಭಾಗ ವೇದಿಕೆಯ ಅಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ನೇತೃತ್ವದಲ್ಲಿ ಸೇರಿದ ನೂರಾರು ಕಾರ್ಯಕರ್ತರು ಅಲ್ಲಿಂದ ಮೈಸೂರು ಬ್ಯಾಂಕ್ ಮಾರ್ಗವಾಗಿ ಮೆರವಣಿಗೆ ಮೂಲಕ ರಾಜಭವನ ಮುತ್ತಿಗೆ ಹಾಕಲು ಹೊರಟರು.

ರಾಜಭವನದತ್ತ ಹೊರಟ ಕಾರ್ಯಕರ್ತರನ್ನು ಪೊಲೀಸರು ಮಾರ್ಗ ಮಧ್ಯದ ಫ್ರೀಡಂ ಪಾರ್ಕ್ ಬಳಿ ತಡೆದಿದ್ದು ಅಲ್ಲಿಯೇ ಸಮಾವೇಶಗೊಂಡು ಎಂಇಎಸ್ ಹಾಗೂ ಶಿವಸೇನೆ ವಿರುದ್ಧ ಘೋಷಣೆಗಳನ್ನು ಕೂಗಿದರು.

- Advertisement -

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಾರಾಯಣ ಗೌಡ ಅವರು, ಬೆಳಗಾವಿಯಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯಗಳು ದಿನೇದಿನೇ ಹೆಚ್ಚಾಗುತ್ತಿವೆ. ತಾಯ್ನೆಲಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿ ಹುತಾತ್ಮರಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಭಗ್ನಗೊಳಿಸಿರುವುದನ್ನು ಸಹಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.

ಮಹಾಮಾನವತಾವಾದಿ ಬಸವಣ್ಣನವರ ಭಾವಚಿತ್ರಕ್ಕೆ ಸೆಗಣಿ ಬಳಿಯಲಾಗಿದೆ. ಬೆಳಗಾವಿ ಮತ್ತು ಮಹಾರಾಷ್ಟ್ರಗಳಲ್ಲಿ ಕನ್ನಡಿಗರ ಆತ್ಮಾಭಿಮಾನದ ಪ್ರತೀಕವಾಗಿರುವ ಕನ್ನಡ ಧ್ಚಜಕ್ಕೆ ಬೆಂಕಿಹಚ್ಚಿ

ರಾಜ್ಯ ಸರ್ಕಾರದ ವಾಹನಗಳಿಗೆ ಬೆಂಕಿ ಹಚ್ಚಿ ನಾಡ ದ್ರೋಹಿ ಕೃತ್ಯ ನಡೆಸಿದ ಎಂಇಎಸ್ ಹಾಗೂ ಶಿವಸೇನೆ ಯನ್ನು ಕೂಡಲೇ  ನಿಷೇಧಿಸುವಂತೆ ಆಗ್ರಹಿಸಿದರು.

ಮಹಾರಾಷ್ಟ್ರದ ವಿವಿಧ ಭಾಗಗಳಲ್ಲಿ ಕನ್ನಡಿಗರನ್ನು ಥಳಿಸಿ, ಹಲ್ಲೆ ನಡೆಸಲಾಗುತ್ತಿದೆ. ಇದಕ್ಕೆಲ್ಲ ಕಾರಣಕರ್ತರು ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಎಂಬ ಭಯೋತ್ಪಾದಕ ಸಂಘಟನೆಗಳ ಗೂಂಡಾಗಳಾಗಿದ್ದು ಎರಡೂ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿದರು.

ಸುಮಾರು 25ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿ ರಾಜಭವನ ಮುತ್ತಿಗೆಯಲ್ಲಿ ಪಾಲ್ಗೊಂಡಿದ್ದರು.

Join Whatsapp