► ಏ.14 ಮತ್ತು 16ರಂದು ನಾಮಪತ್ರ ಸಲ್ಲಿಕೆಗೆ ಅವಕಾಶವಿಲ್ಲ
ಬೆಂಗಳೂರು: ಕರ್ನಾಟಕದ 224 ಕ್ಷೇತ್ರಗಳ ವಿಧಾನಸಭೆ ಚುನಾವಣೆಗೆ ಇಂದಿನಿಂದ(ಏಪ್ರಿಲ್ 13) ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಏಪ್ರಿಲ್ 20ರವರೆಗೂ ನಾಮಪತ್ರ ಸಲ್ಲಿಸಬಹುದಾಗಿದೆ.
ಇನ್ನು ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಮತ್ತು 16 ರಂದು ಭಾನುವಾರ ಸಾರ್ವತ್ರಿಕ ರಜಾ ದಿನವಾಗಿದ್ದು, ಅಂದು ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುವುದಿಲ್ಲ. ಹೀಗಾಗಿ ನಾಮಪತ್ರ ಸಲ್ಲಿಕೆಗೆ ಏಳು ದಿನಗಳಲ್ಲಿ ಎರಡು ದಿನ ಸರ್ಕಾರಿ ರಜೆ ಇರಲಿದ್ದು, ಐದು ದಿನಗಳು ಮಾತ್ರ ನಾಮಪತ್ರ ಸಲ್ಲಿಕೆಗೆ ಕಾಲಾವಕಾಶ ಇದೆ.
ಇದೇ ಮೊದಲ ಬಾರಿಗೆ ಆನ್ ಲೈನ್ ಮೂಲಕ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಎಲ್ಲಾ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.
ಕಾಂಗ್ರೆಸ್ 166 ಕ್ಷೇತ್ರಗಳಿಗೆ, ಬಿಜೆಪಿ 212 ಹಾಗೂ ಜೆಡಿಎಸ್ 93 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ‘ಬಿ’ ಫಾರಂ ವಿತರಣೆ ಆರಂಭಿಸಿವೆ.