Home ಟಾಪ್ ಸುದ್ದಿಗಳು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಜೆಪಿ ನಡ್ಡಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ : ಜೆಪಿ ನಡ್ಡಾಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣ ರದ್ದು ಕೋರಿ ನಡ್ಡಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠವು ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿದೆ. ಅದರಂತೆ ಜೆ.ಪಿ.ನಡ್ಡಾರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ವಿಜಯನಗರ ಜಿಲ್ಲೆ ಹರಪ್ಪನಹಳ್ಳಿಯಲ್ಲಿ ಕಳೆದ ಮೇ 7 ರಂದು ಚುನಾವಣಾ ಪ್ರಚಾರ ಭಾಷಣ ಮಾಡಿದ್ದರು. ಈ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ‌ ಬಂದರೆ ಕಿಸಾನ್ ಸಮ್ಮಾನ್ ಯೋಜನೆ, ಗರೀಬ್ ಕಲ್ಯಾಣ್ ಯೋಜನೆ, ಹೊಸ ರಸ್ತೆ ನಿರ್ಮಾಣ ಬಂದ್ ಆಗಲಿದೆ ಎಂಬ ಹೇಳಿಕೆ ನೀಡಿದ್ದರು. ಈ ಬಗ್ಗೆ ಕಾಂಗ್ರೆಸ್ ಪಕ್ಷ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಚುನಾವಣಾ ಆಯೋಗ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿತ್ತು.

ಐಪಿಸಿ ಸೆಕ್ಷನ್ 171 ಎಫ್ ಅಡಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಕೇಸ್ ದಾಖಲಿಸಿತ್ತು. ಪ್ರಕರಣ ರದ್ದು ಕೋರಿ ಜೆ.ಪಿ.ನಡ್ಡಾ ಪರ ವಕೀಲ ವಿನೋದ್ ಕುಮಾರ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸದ್ಯ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣಕ್ಕೆ ಮಧ್ಯಂತರ ತಡೆ ನೀಡಿದೆ. ಇದರಿಂದ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪವಿದ್ದ ಕ್ರಿಮಿನಲ್‌ ಪ್ರಕರಣದಿಂದ ಜೆ.ಪಿ.ನಡ್ಡಾರಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದೆ.

Join Whatsapp
Exit mobile version