ಬೆಂಗಳೂರು: ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಕಾಲೇಜೊಂದರ ಕನಿಷ್ಠ 58 ವಿದಾರ್ಥಿನಿಯರನ್ನು ಅಮಾನತುಗೊಳಿಸಲಾಗಿದೆ.
ಶಿರಾಳ ಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.
ಹೈಕೋರ್ಟ್ ನ ಮಧ್ಯಂತರ ಆದೇಶವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಹಿಜಾಬ್ ಧರಿಸಿ ತರಗತಿಗೆ ಆಗಮಿಸದಂತೆ ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅಭಿವೃದ್ಧಿ ಸಮಿತಿ ಮನವರಿಗೆ ಮಾಡಿದ ಹೊರತಾಗಿಯೂ ವಿದ್ಯಾರ್ಥಿಗಳು ಹಿಜಾಬ್ ತೆಗೆಯಲು ನಿರಾಕರಿಸಿ ಪ್ರತಿಭಟನೆ ನಡೆಸಿದ್ದರು ಎಂದು ಆಡಳಿತ ಮಂಡಳಿ ದೂರಿದೆ.
ಇದಕ್ಕಾಗಿ ಆ ವಿದ್ಯಾರ್ಥಿಗಳನ್ನು ಕಾಲೇಜಿನಿಂದ ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.
ಇದರಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಸಿಬ್ಬಂದಿಗಳೊಂದಿಗೆ ವಾಗ್ವಾದಕ್ಕಿಳಿದಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಅವರನ್ನು ಚದುರಿಸಿದ್ದರು.
ಬೆಳಗಾವಿ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಲು ಅವಕಾಶ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದಾಗ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಮಧ್ಯೆ ಬೆಳಗಾವಿಯ ವಿಜಯ್ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ವಿದಾರ್ಥಿಗಳ ಪ್ರತಿಭಟನೆಯಿಂದಾಗಿ ಆಡಳಿತವು ಅನಿರ್ದಿಷ್ಟ ಅವಧಿಗೆ ರಜೆ ಘೋಷಿಸಿದ್ದರೆ, ಹರಿಹರದ ಎಸ್ ಜೆವಿಪಿ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಿ ಅನುಮತಿ ನಿರಾಕರಿಸಿದ ಬಳಿಕ ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟಿಸಿದರು.