ಉತ್ತರ ಕನ್ನಡ: ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಜು.14 ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಇಂದೂ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಡಿಸಿ ಲಕ್ಷ್ಮೀಪ್ರಿಯ ಶಾಲೆ ಮತ್ತು ಪಿಯು ಕಾಲೇಜಿಗೆ ರಜೆ ಘೋಷಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲೂ ರಜೆ ಘೋಷಣೆ:
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜು.15ರಂದು ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ಮತ್ತು ಸೋಮವಾರಪೇಟೆಯ ಅಂಗನವಾಡಿ ಸೇರಿದಂತೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಪ್ಪ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಟರಾಜು ತಿಳಿಸಿದ್ದಾರೆ.