ಬೆಂಗಳೂರು: ಶಿರವಸ್ತ್ರ- ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿರುವ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳನ್ನು, ಹೈಕೋರ್ಟ್ ಸೂಚನೆಯಂತೆ ಬುಧವಾರದಿಂದ ಪುನಾರಂಭ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಮಾತನಾಡಿದ ಸಚಿವರು, ಫೆಬ್ರವರಿ 16, ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ಹೇಳಿದ್ದಾರೆ.
ಹೈಕೋರ್ಟ್ ಸೂಚನೆಯಂತೆ ಕಾಲೇಜು ಪ್ರಾರಂಭಿಸಲಿದ್ದೇವೆ, ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬೇಕು. ಕೋರ್ಟ್ ಆದೇಶ ಉಲ್ಲಂಘಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಶಕ್ತಿ ಭವನದಲ್ಲಿ ಸಭೆ ನಡೆದಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.