ಬೆಂಗಳೂರು,ಮೇ.22 : ಹವಾಮಾನ ವೈಪರೀತ್ಯದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 25ರವರೆಗೆ ಮಳೆ ಮುಂದುವರಿಯಲಿದ್ದು 13 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ಕೋಲಾರ, ಮೈಸೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಯಿದೆ.
ಇದರಿಂದಾಗಿ ಈ ಎಲ್ಲಾ ಜಿಲ್ಲೆಗಳಲ್ಲಿ ಮೇ 25ರವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು ನಿನ್ನೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 26ರವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದರೂ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಗದಗ ಜಿಲ್ಲೆಯ ಬೆಟಗೇರಿ, ನರೇಗಲ್, ಮುಂಡರಗಿ, ಶಿರಹಟ್ಟಿಗಳಲ್ಲಿ ಬಿರುಸಿನ ಮಳೆಯಾಗಿದೆ. ಹಂಪಿ ಸುತ್ತಮುತ್ತ, ಕಮಲಾಪುರಗಳಲ್ಲಿ ಗಂಟೆಗೂ ಹೆಚ್ಚು ಸಮಯ ಬಿರುಗಾಳಿ ಸಹಿತ ಮಳೆಯಾಗಿದೆ. ಹಾಸನ ನಗರ ಹಾಗೂ ವಿವಿಧೆಡೆ ಗುಡುಗು ಸಹಿತ ಸಾಧಾರಣ ಹಾಗೂ ಸಕಲೇಶಪುರ, ಬೇಲೂರು, ಆಲೂರು ತಾಲ್ಲೂಕುಗಳಲ್ಲಿ ತುಂತುರು ಮಳೆಯಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಮೊಳಕಾಲ್ಮುರು, ಚಳ್ಳಕೆರೆ, ಹೊಸದುರ್ಗ ತಾಲ್ಲೂಕುಗಳಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ ನಗರ, ಹೊನ್ನಾಳಿ, ಮಲೇಬೆನ್ನೂರಿನಲ್ಲಿ ಸಾಧಾರಣ ಮಳೆಯಾಗಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವಿವಿಧೆಡೆ ಸಾಧಾರಣ, ರಾಯಚೂರಿನಲ್ಲಿ ಕೆಲ ಹೊತ್ತು ತುಂತುರು ಮಳೆಯಾಯಿತು. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಹದವಾದ ಮಳೆಯಾಗಿದೆ.