ಬೆಂಗಳೂರು: ಖ್ಯಾತ ಕಲಾವಿದ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸರ್ಕಾರ ಘೋಷಿಸಿದ್ದು, ನವೆಂಬರ್ 1 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಈ ವರೆಗೆ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದ್ದು, 2009ರ ನಂತರ ಮೊದಲ ಬಾರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಪುನೀತ್ ರಾಜ್ ಕುಮಾರ್ ಕುಟುಂಬದವರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು ಎಂದು ತಿಳಿಸಿದರು.
ಪುನೀತ್ ರಾಜ್ ಕುಮಾರ್ ಅವರು ನಿಜವಾದ ಕರ್ನಾಟಕ ರತ್ನ
ಕನ್ನಡ ಚಿತ್ರರಂಗಕ್ಕೆ ಹಾಗೂ ಕನ್ನಡ ಭಾಷೆ ಸಂಸ್ಕೃತಿಗೆ ಪುನೀತ್ ರಾಜ್ ಕುಮಾರ್ ಅವರ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ . ತಮ್ಮ ಜೀವಮಾನದಲ್ಲಿ ದೊಡ್ಡ ಸಾಧನೆಯನ್ನು ಮಾಡಿ ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ಅವರು ನಿಜವಾದ ಕರ್ನಾಟಕ ರತ್ನ. ಅವರು ಸದಾಕಾಲ ಯುವಜನರಿಗೆ ಪ್ರೇರಣೆಯಾಗಿರಬೇಕು ಎಂಬ ಮಹಾದಾಸೆಯಿಂದ ಡಾ.ಪುನೀತ್ ರಾಜ್ ಕುಮಾರ್ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಸಮಾರಂಭವನ್ನ ನವೆಂಬರ್ 1ರಂದು ಸಂಜೆ 5 ಗಂಟೆಗೆ ವಿಧಾನಸೌಧ ಗ್ರಾಂಡ್ ಸ್ಟೆಪ್ಸ್ ಮೇಲೆ ಆಯೋಜಿಸಲಾಗುವುದು ವಿಶೇಷ ಮುಖ್ಯ ಅತಿಥಿಗಳು, ಶ್ರೇಷ್ಠ ಸಾಹಿತಿಗಳು, ಖ್ಯಾತ ಚಲನಚಿತ್ರ ನಟರು, ಶಾಸಕರು, ಹಿರಿಯ ಸಾಧಕರು ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದು, ಅರ್ಥಪೂರ್ಣವಾದ ಕಾರ್ಯಕ್ರಮವಾಗಿರಲಿದೆ ಎಂದರು.
ಬೆಂಗಳೂರಿನ ವಿವಿಧ ಕಡೆ ಪುನೀತ್ ರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮಗಳು
ಪುನೀತ್ ರಾಜ್ ಕುಮಾರ್ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಆಯೋಜಿಸಬೇಕೆಂಬ ಅಭಿಮಾನಿಗಳ ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನವೆಂಬರ್ 1 ರ ನಂತರ ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಒಟ್ಟು 3 ಕಾರ್ಯಕ್ರಮಗಳನ್ನು ಸುಮಾರು10 ದಿನಗಳ ಕಾಲ ಆಯೋಜಿಸಲಾಗುವುದು ಎಂದು ತಿಳಿಸಿದರು.