ಬೆಂಗಳೂರು: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೇರಳ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಆಧರಿಸಿ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದ್ದಾರೆ.
ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. 15 ಲಕ್ಷ ರೂಪಾಯಿ ಪರಿಹಾರ ನೀಡುವ ಕಾಂಗ್ರೆಸ್ ಸರ್ಕಾರದ ತೀರ್ಮಾನ ಖಂಡನೀಯ ಎಂದು ಅವರು ಹೇಳಿದ್ದಾರೆ. ಕಾಡಾನೆ ದಾಳಿಯಿಂದ ಕೇರಳದ ವಯನಾಡು ಜಿಲ್ಲೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದರು. ಮೃತನ ಕುಟುಂಬಕ್ಕೆ ನೆರವಾಗುವಂತೆ ‘ಕೈ’ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದರು. ಅದರ ಮೇರೆಗೆ ಕರ್ನಾಟಕದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ. ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಅಕ್ರಮವಾಗಿ ಹಣ ಮಂಜೂರು ಮಾಡಿದ್ದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ವಿಜಯೇಂದ್ರ ಪ್ರಶ್ನಿಸಿದ್ದಾರೆ. ಕರ್ನಾಟಕದಲ್ಲಿ ಬರಗಾಲದಿಂದ ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ತಿರೋದಕ್ಕೆ ಸಿಎಂ ಹಾಗೂ ಸಚಿವರು ಹೊಣೆ ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.