ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ನಿಯಂತ್ರಣ 2021 -ಎಲ್ ಡಿ ಎ ಆರ್ ಮತ್ತು ದ್ವೀಪಗಳಲ್ಲಿ ಸಮಾಜ ವಿರೋಧಿ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (ಪಾಸಾ) ಅನ್ನು ಜಾರಿಗೊಳಿಸುವ ಲಕ್ಷದ್ವೀಪ ಆಡಳಿತಾಧಿಕಾರಿ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ ಪಿಐಎಲ್ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ , ಶುಕ್ರವಾರ ಈ ಸಂಬಂಧ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿದೆ.
ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರದ ನಿಯಂತ್ರಣದ ಕೆಲಸ ಕಾರ್ಯಗಳು ಮತ್ತು ಪಾಸಾ ಜಾರಿಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಲಯ, ಎರಡು ವಾರಗಳಲ್ಲಿ ಈ ಸಂಬಂಧ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದೆ.
ಕಾಂಗ್ರೆಸ್ ಮುಖಂಡ ಕೆ ಪಿ ನೌಶಾದ್ ಅಲಿ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಆಡಳಿತಾಧಿಕಾರಿ ಲಕ್ಷದ್ವೀಪದಲ್ಲಿನ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ವಿಷಯಗಳಲ್ಲಿ ಅಕ್ರಮವಾಗಿ ಹಸ್ತಕ್ಷೇಪ ಮಾಡಿದ್ದಾರೆ ಎಂದು ಅಲಿ ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಪರಿಶಿಷ್ಟ ಪಂಗಡಕ್ಕೆ ಸೇರಿದ ದ್ವೀಪವಾಸಿಗಳ ಒಡೆತನದ ಆಸ್ತಿಯನ್ನು ವಶಕ್ಕೆ ಪಡೆಯಲು ಆಡಳಿತಕ್ಕೆ ಅಧಿಕಾರವನ್ನು ನೀಡುತ್ತಿರುವುದರಿಂದ ದ್ವೀಪ ನಿವಾಸಿಗಳು ಲಕ್ಷದ್ವೀಪ ಅಭಿವೃದ್ಧಿ ಪ್ರಾಧಿಕಾರ (ಎಲ್ಡಿಎ)ವನ್ನು ವಿರೋಧಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಹೊಸದಾಗಿ ಜಾರಿಗೆ ತರಲಾದ ಪಾಸಾ ಕಾಯ್ದೆಯು ಸಾರ್ವಜನಿಕವಾಗಿ ಯಾವುದೇ ಮಾಹಿತಿ ನೀಡದೆ ವ್ಯಕ್ತಿಯನ್ನು ಒಂದು ವರ್ಷದವರೆಗೆ ಬಂಧಿಸಲು ಆಡಳಿತಕ್ಕೆ ಅಧಿಕಾರ ನೀಡುತ್ತದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.