ಕೊಡಗು: ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ; ವಿವಿಧ ಕಾರ್ಯಕ್ರಮ ಆಯೋಜಿಸಲು ಡಿಸಿ ಸಲಹೆ

Prasthutha|

ಮಡಿಕೇರಿ: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯ ಹಾಡಿ ಹಾಗೂ ಇತರೆ ಕಡೆಗಳಲ್ಲಿ ಹಮ್ಮಿಕೊಳ್ಳುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಿರ್ದೇಶನ ನೀಡಿದ್ದಾರೆ.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಿಸುವ ಬಗ್ಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಬಾಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವ ಪ್ರದೇಶದಲ್ಲಿ ಶಿಕ್ಷಣದ ಮಹತ್ವ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಹಾಡಿಗಳಲ್ಲಿ ಬೀದಿನಾಟಕ ಹಾಗೂ ಪ್ರಬಂಧ ಸ್ಪರ್ಧೆ ಏರ್ಪಡಿಸುವುದು ಹೀಗೆ ಹಲವು ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಅವರು ಸೂಚಿಸಿದರು.

ಜಾಥಾ ಏರ್ಪಡಿಸುವುದು, ಲೋಗೋ ಬಿಡುಗಡೆ ಮಾಡುವುದು, ಬಾಲಕಾರ್ಮಿಕ ಪದ್ಧತಿಯಿಂದ ಸಮಾಜದ ಮೇಲುಂಟಾಗುವ ದುಷ್ಪರಿಣಾಮಗಳ ಬಗ್ಗೆ ಎರಡು ನಿಮಿಷದ ವೀಡಿಯೋವನ್ನು ಬಿಡುಗಡೆ ಮಾಡಿಸುವಂತೆ ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಅವರು ಸಲಹೆ ಮಾಡಿದರು.

- Advertisement -

ಇದೇ ಜೂನ್, 12 ರಂದು ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸಬೇಕಿದೆ. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಹಕಾರ ನೀಡಬೇಕು ಎಂದು  ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ ಮನವಿ ಮಾಡಿದರು.

ಬಾಲಕಾರ್ಮಿಕ ಪದ್ಧತಿ ಬಗ್ಗೆ ಸಮಸ್ಯೆಗಳಿರುವ ಕಡೆಗಳಲ್ಲಿ ಅರಿವು ಮೂಡಿಸುವಂತಾಗಬೇಕು ಎಂದು ರಾಯ್ ಡೇವಿಡ್ ಸಲಹೆ ಮಾಡಿದರು.

ಶ್ರೀಮಂಗಲ, ಕುಟ್ಟ, ಸಿದ್ದಾಪುರ, ಪಾಲಿಬೆಟ್ಟ ಇತರೆ ಕಡೆಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತಾಗಬೇಕು ಎಂದು ಚೈಲ್ಡ್ ಲೈನ್‍ನ ನವೀನ್ ಕುಮಾರ್ ಸಲಹೆ ಮಾಡಿದರು.

Join Whatsapp