ಮಡಿಕೇರಿ: ಕೊಡಗು ಜಿಲ್ಲಾಡಳಿತದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ನಡೆಯಿತು.
ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಕಾಲ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ ನಾಗೇಶ್ ಧ್ವಜಾರೋಹಣ ನೆರವೇರಿಸಿದರು.
ಸಮಾರಂಭದಲ್ಲಿ ಮಾತನಾಡಿದ ಸಚಿವರು, ಸ್ವಾತಂತ್ರ್ಯಕ್ಕಾಗಿ ತ್ಯಾಗ-ಬಲಿದಾನಗೈದ ಮಹನೀಯರ ಆದರ್ಶವನ್ನು ಗೌರವಿಸಿ ಸಾಮರಸ್ಯದಿಂದ ಬಾಳ್ವೆ ನಡೆಸುವ ಜವಾಬ್ದಾರಿ ನಮ್ಮದಾಗಿದೆ. ಇದೇ ಸಂದರ್ಭದಲ್ಲಿ ನಮ್ಮ ದೇಶದ ಐಕ್ಯತೆ, ಸಂಸ್ಕೃತಿ, ಪರಂಪರೆಗಳ ರಕ್ಷಣೆಗೆ ನಾವೆಲ್ಲರೂ ಕೈಜೋಡಿಸೋಣ. ಸ್ವಾತಂತ್ರ್ಯಹೋರಾಟದ ಶತಮಾನದ ಇತಿಹಾಸವು ದೇಶದ ಅಭಿವೃದ್ಧಿಗೆ ಮುನ್ನೋಟವಾಗಲಿ ಎಂದು ಹೇಳಿದರು.
ಭಾರತೀಯ ರಾಷ್ಟ್ರೀಯ ಚಳುವಳಿಯು ದೇಶದ ಸ್ವಾತಂತ್ರ್ಯದ ಹೋರಾಟದ ಮೈಲುಗಲ್ಲಾಗಿದೆ. ಲಕ್ಷಾಂತರ ಭಾರತೀಯರು ಸ್ವಾತಂತ್ರ್ಯಹೋರಾಟದಲ್ಲಿ ಪಾಲ್ಗೊಂಡು ದೇಶಕ್ಕಾಗಿ ಸರ್ವಸ್ವವನ್ನು ಅರ್ಪಿಸಿದ್ದಾರೆ. ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಕೊಡಗಿನ ಹಲವು ವೀರರು ಪಾಲ್ಗೊಂಡಿದ್ದು, ಅವರ ಸೇವೆಯನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಎಂ.ಪಿ ಸುಜಾಕುಶಾಲಪ್ಪ, ಎಸ್.ಎಲ್ ಭೋಜೇಗೌಡ, ಆಯನೂರು ಮಂಜುನಾಥ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷ ನಾಪಂಡ ಎಂ ರವಿಕಾಳಪ್ಪ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ. ಅನ್ಬುಕುಮಾರ್, ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ ಅಯ್ಯಪ್ಪ, ಜಿ.ಪಂ ಸಿಇಒ ಭಂವರ್ ಸಿಂಗ್ ಮೀನಾ ಇತರರು ಪಾಲ್ಗೊಂಡಿದ್ದರು.