ಕೊಡಗು: ಪಕ್ಷಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್‌ ಮಾಜಿ ಜಿಲ್ಲಾಧ್ಯಕ್ಷ ಶಿವು ಮಾದಪ್ಪ

Prasthutha|

ಮಡಿಕೇರಿ: ಕೊಡಗು ಕಾಂಗ್ರೆಸ್ಸಿನ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮುಕ್ಕಾಟ್ಟೀರ ಶಿವು ಮಾದಪ್ಪ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

1998 ರಿಂದಲೂ ಕೊಡಗಿನ ಕಾಂಗ್ರೆಸ್ ಪಕ್ಷದಲ್ಲಿ ತೊಡಗಿಸಿಕೊಂಡಿದ್ದ ಕುಟ್ಟ ಗ್ರಾಮದ ಮುಕ್ಕಾಟೀರ ಶಿವು ಮಾದಪ್ಪ ದಿಢೀರಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಕುಟ್ಟ ಯುವ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ, ಕುಟ್ಟ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು. ಶ್ರೀಮಂಗಲ ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯರಾಗಿ ಚುನಾಯಿತರಾಗಿದ್ದ ಶಿವು ಮಾದಪ್ಪ 2 ವರ್ಷಗಳ ಕಾಲ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

- Advertisement -

ಈ ಕುರಿತು ಮಡಿಕೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಯಾವುದೇ ಕಾರಣ ನೀಡದೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ನನ್ನನ್ನು ಕೈಬಿಡಲಾಯಿತು. ಈವರೆಗೂ ನನಗೆ ಯಾವದೇ ಮಾಹಿತಿ ನೀಡಿರುವುದಿಲ್ಲ. ಕಳೆದ ಮೂರು ವರ್ಷದಿಂದ ಪಕ್ಷದ ಎಲ್ಲಾ ಚಟುವಟಿಕೆಗಳಿಂದ  ತಟಸ್ಥವಾಗಿದ್ದೆ. ನಾನು ರಾಜಕೀಯ ಸನ್ಯಾಸ ಸ್ವೀಕರಿಸಲಾರೆ. ಮುಂದೆ ಸಕ್ರೀಯ ರಾಜಕಾರಣದಲ್ಲಿಯೇ ಮುಂದುವರಿಯಲಿದ್ದೇನೆ ಎಂದ ಅವರು, ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತನಕ್ಕೆ ರಾಜೀನಾಮೆ ನೀಡಿದ್ದು, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಧರ್ಮಜ ಉತ್ತಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದೇನೆ. ನಾಳೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರಿಗೂ ರಾಜೀನಾಮೆ ಪತ್ರ ಕಳುಹಿಸುವದಾಗಿ ಶಿವು ಮಾದಪ್ಪ ತಿಳಿಸಿದ್ದಾರೆ.



Join Whatsapp