SC–ST ಯವರಿಗೆ ಅನ್ಯಾಯ । ಕೆಟಿಪಿಪಿ ಕಾಯ್ದೆ ತಿದ್ದುಪಡಿಯನ್ನು ಕೂಡಲೇ ವಾಪಾಸ್ ಪಡೆಯುವಂತೆ ಸಿದ್ದರಾಮಯ್ಯ ಆಗ್ರಹ

Prasthutha|

►ಪರಿಶಿಷ್ಟ ಜಾತಿ ಮತ್ತು ವರ್ಗದ ಗುತ್ತಿಗೆದಾರರಿಗೆ ಅನ್ಯಾಯ !

- Advertisement -

ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಗುತ್ತಿಗೆದಾರರಿಗೆ ಅನ್ಯಾಯವಾಗುವಂತೆ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳ ಪಾರದರ್ಶಕ ಕಾಯಿದೆಗೆ (ಕೆಟಿಪಿಪಿ) ತಂದಿರುವ ತಿದ್ದುಪಡಿಯನ್ನು ಕೂಡಲೇ ವಾಪಸ್ ಪಡೆಯುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ತಿದ್ದುಪಡಿ ಮೂಲಕ ಸರ್ಕಾರ ಶೋಷಿತ ವರ್ಗಗಳ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಸರ್ಕಾರ ಕೊಡಲಿ ಪೆಟ್ಟು ಕೊಟ್ಟಿದೆ ಎಂದು ಅವರು ಕಿಡಿ ಕಾರಿದ್ದಾರೆ.

ತಮ್ಮ ನಿವಾಸದಲ್ಲಿ ಇದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಮಗಾರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ಗುತ್ತಿಗೆದಾರರಿಗೆ ಮೀಸಲು ಸೌಲಭ್ಯ ಒದಗಿಸುವ ಕಾನೂನನನ್ನು ದೇಶದ ಯಾವುದೇ ರಾಜ್ಯವೂ ಜಾರಿಗೆ ತಂದಿಲ್ಲ. ಆದರೆ, ಆ ಸೌಲಭ್ಯವನ್ನು ಬಿಜೆಪಿ ಸರ್ಕಾರ ಕಸಿದುಕೊಳ್ಳಲು ಮುಂದಾಗಿದೆ ಎಂದರು.

- Advertisement -

ತಿದ್ದುಪಡಿ ಪ್ರಕಾರ ಎರಡು ಕೋಟಿ ರೂ.ಗಳ ವರೆಗಿನ ಕಾಮಗಾರಿಯನ್ನು ಟೆಂಡರ್ ಕರೆಯದೆ ಭೂ ಸೇನಾ ನಿಗಮಕ್ಕೆ ವಹಿಸಬಹುದು. ನಾವು ಅಧಿಕಾರದಲ್ಲಿ ಇದ್ದಾಗ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಗುತ್ತಿಗೆದಾರರಿಗೆ 50 ಲಕ್ಷ ರೂ.ಗಳವರೆಗಿನ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲು ನೀಡುವ ಕಾನೂನು ಜಾರಿಗೆ ತಂದಿದ್ದೆವು. ಇದರಿಂದ ಆ ವರ್ಗದ  ಗುತ್ತಿಗೆದಾರರಿಗೆ ಅನುಕೂಲವಾಗಿತ್ತು.  ನನ್ನ ಕೊನೆಯ ಬಜೆಟ್‍ನಲ್ಲಿ ಕಾಮಗಾಗಿ ವೆಚ್ಚವನ್ನು ಒಂದು ಕೋಟಿ ರೂ.ಗಳಿಗೆ ಏರಿಸುವ ಘೋಷಣೆ ಮಾಡಲಾಗಿತ್ತು. ಆದರೆ, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಘೋಷಣೆ ಜಾರಿಗೆ ಬರಲಿಲ್ಲ.

ಎರಡು ಕೋಟಿ ರೂ. ವರೆಗಿನ ಕಾಮಗಾರಿ ಟೆಂಡರ್ ನನ್ನು ಭೂ ಸೇನಾ ನಿಗಮಕ್ಕೆ ವಹಿಸಿದರೆ ಪರಿಶಿಷ್ಟ ಜಾತಿ ಮತ್ತು ವರ್ಗದ ಗುತ್ತಿಗೆದಾರರಿಗೆ ಭಾರಿ ಅನ್ಯಾಯವಾಗುತ್ತದೆ. ಅವರಿಗೆ ಒದಗಿಸಿರುವ ಮೀಸಲು ಸೌಲಭ್ಯವನ್ನು ಕಸಿಯುವ ಹುನ್ನಾರವನ್ನು ಸರ್ಕಾರ ನಡೆಸಿದೆ. ದಲಿತರಿಗೆ ಕೇವಲ ರಾಜಕೀಯ ಸ್ವಾತಂತ್ರ್ಯ ದೊರೆತರೆ ಸಾಲದು. ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವೂ ಸಿಗಬೇಕು ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದ್ದರು. ಆದರೆ, ರಾಜ್ಯ ಸರ್ಕಾರ ತಿದ್ದುಪಡಿ ಮೂಲಕ ದಲಿತರಿಗೆ ದೊಡ್ಡ ದ್ರೋಹ ಮತ್ತು ಅನ್ಯಾಯ ಎಸಗಿದೆ. ಯಾವುದೇ ಸರ್ಕಾರ, ಶೋಷಿತ ವರ್ಗಗಳಿಗೆ ನ್ಯಾಯ ದೊರಕಿಸಿಕೊಡುವ ಕಾನೂನುಗಳನ್ನು ಜಾರಿಗೆ ತರಬೇಕೇ ಹೊರತು ಅವರಿಗೆ ಮಾರಕ ಆಗುವಂಥ ಕಾಯಿದೆಗಳನ್ನು ಅನುಷ್ಠಾನಗೊಳಿಸಬಾರದು.

Join Whatsapp