ನೂತನ ತಾಲ್ಲೂಕು ಕೇಂದ್ರವಾಗಿ ಕುಶಾಲನಗರ ಅಸ್ತಿತ್ವಕ್ಕೆ

Prasthutha|

ಕುಶಾಲನಗರ: ಕೊಡಗು ಜಿಲ್ಲೆಯ ಕುಶಾಲನಗರ ನೂತನ ತಾಲ್ಲೂಕು ಕೇಂದ್ರವಾಗಿ ಮಂಗಳವಾರ ಅಸ್ತಿತ್ವಕ್ಕೆ ಬಂದಿದೆ. ಕಂದಾಯ ಸಚಿವರಾದ ಆರ್.ಅಶೋಕ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಇತರರು ಕುಶಾಲನಗರ ನೂತನ ತಾಲ್ಲೂಕು ಅಸ್ತಿತ್ವಕ್ಕೆ ಚಾಲನೆ ನೀಡಿದರು.

- Advertisement -

ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಕಂದಾಯ ಸಚಿವರಾದ ಆರ್.ಅಶೋಕ ಅವರು ಕುಶಾಲನಗರ ತಾಲ್ಲೂಕು ಕೇಂದ್ರವಾಗಬೇಕು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು 20-30 ಬಾರಿ ಕಚೇರಿಗೆ ಬಂದು ವಿನಂತಿಸಿದ್ದಾರೆ. ಅಪ್ಪಚ್ಚುರಂಜನ್ ಅವರ ಪ್ರಯತ್ನದಿಂದ ಕುಶಾಲನಗರ ತಾಲ್ಲೂಕು ಕೇಂದ್ರವಾಗಿದೆ. ಇಲ್ಲಿನ ಶಾಸಕರ ಹೋರಾಟದ ಫಲವಾಗಿ ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ ಎಂದು ಕಂದಾಯ ಸಚಿವರು ನುಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಪೊನ್ನಂಪೇಟೆ ಮತ್ತು ಕುಶಾಲನಗರ ನೂತನ ತಾಲ್ಲೂಕು ಕೇಂದ್ರವಾಗಬೇಕು ಎಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಇಂದು ಕುಶಾಲನಗರ ತಾಲ್ಲೂಕು ಅಸ್ತಿತ್ವಕ್ಕೆ ಬಂದಿದೆ ಎಂದರು.

- Advertisement -

ತಾಲ್ಲೂಕು ಕೇಂದ್ರದಲ್ಲಿ ಗ್ರೇಡ್-1 ತಹಶೀಲ್ದಾರರು ಸೇರಿದಂತೆ ಒಟ್ಟು 12 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಜೊತೆಗೆ 50 ಲಕ್ಷ ರೂ. ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದರು.

ಸರ್ಕಾರ 2020-21 ನೇ ಸಾಲಿಗೆ ವಿಪತ್ತು ನಿರ್ವಹಣೆಗೆ, ಬೆಳೆ ಹಾನಿ ಪರಿಹಾರಕ್ಕೆ, ಕೋವಿಡ್ ನಿರ್ವಹಣೆಗಾಗಿ ಹೀಗೆ ಹಲವು ವಿಪತ್ತನ್ನು ಎದುರಿಸಲು ಹೆಚ್ಚಿನ ಹಣ ಬಿಡುಗಡೆ ಮಾಡಿದೆ ಎಂದು ಅವರು ಹೇಳಿದರು.

ಕುಶಾಲನಗರ ತಾಲ್ಲೂಕು ಅಭಿವೃದ್ಧಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ನೆರವು ನೀಡಲಾಗುವುದು. ಹಂತ ಹಂತವಾಗಿ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಚಿವರು ಹೇಳಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಮಾತನಾಡಿ ಹಲವು ವರ್ಷಗಳ ಪ್ರಯತ್ನದಿಂದ ಕುಶಾಲನಗರ ನೂತನ ತಾಲ್ಲೂಕು ಕೇಂದ್ರವಾಗಿ ಅಸ್ತಿತ್ವಕ್ಕೆ ಬಂದಿದೆ. ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕಂದಾಯ ಸಚಿವರಾದ ಆರ್.ಅಶೋಕ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಕುಶಾಲನಗರದಲ್ಲಿ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಬೇಕು. ಎಲ್ಲಾ ಇಲಾಖೆಗಳು ಮಿನಿ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುವಂತಾಗಬೇಕು. ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಈ ವೇಳೆ ಶಾಸಕರು ಕೋರಿದರು.

ಸಂಸದರಾದ ಪ್ರತಾಪ್ ಸಿಂಹ ಅವರು ಮಾತನಾಡಿ ಕೊಡಗು ಜಿಲ್ಲೆ ಭೂ ವಿಸ್ತೀರ್ಣದಲ್ಲಿ ವಿಶಾಲವಾಗಿದ್ದು, ಸಾರ್ವಜನಿಕರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಕುಶಾಲನಗರವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡಲಾಗಿದೆ. ಕುಶಾಲನಗರವು ಶಿಕ್ಷಣ, ವಾಣಿಜ್ಯ, ಕೈಗಾರಿಕೆ, ವ್ಯಾಪಾರ, ಪ್ರವಾಸೋದ್ಯಮಕ್ಕೆ ಹೆಸರಾಗಿದ್ದು, ಆ ದಿಸೆಯಲ್ಲಿ ಜಿಲ್ಲೆಯ ಪ್ರಮುಖ ತಾಲ್ಲೂಕು ಕೇಂದ್ರವಾಗಿ ಅಭಿವೃದ್ಧಿ ಮಾಡಲು ಎಲ್ಲರೂ ಕೈಜೋಡಿಸಬೇಕಿದೆ ಎಂದರು.

ಕಂದಾಯ ಸಚಿವರಾಗಿ ಆರ್.ಅಶೋಕ ಅವರು ಜನಪರವಾಗಿ, ಬಡ ಜನರಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿಯ ಕಡೆಗೆ ಹೀಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಮಾತನಾಡಿ ಕುಶಾಲನಗರವನ್ನು ಕಾವೇರಿ ತಾಲ್ಲೂಕು ಆಗಬೇಕು ಎಂದು ಹಲವು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದ್ದು, ಅದರಂತೆ ತಾಲ್ಲೂಕು ಅಸ್ತಿತ್ವಕ್ಕೆ ಬಂದಿರುವುದು ಸಂತಸ ತಂದಿದೆ ಎಂದರು.

ಕುಶಾಲನಗರ ತಾಲ್ಲೂಕು ಕೇಂದ್ರವಾಗಿರುವುದು ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್, ತಹಶೀಲ್ದಾರ್ ಗೋವಿಂದ ರಾಜು, ಪ್ರಕಾಶ್ ಇತರರು ಇದ್ದರು.

Join Whatsapp