Home ಟಾಪ್ ಸುದ್ದಿಗಳು ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ನ್ಯಾಯಾಲಯದ ಮುಂದೆ ಆಶಿಶ್ ಮಿಶ್ರಾ ಶರಣಾಗತಿ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ನ್ಯಾಯಾಲಯದ ಮುಂದೆ ಆಶಿಶ್ ಮಿಶ್ರಾ ಶರಣಾಗತಿ

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಬಿಜೆಪಿ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿದ ನಂತರ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಭಾನುವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಮುಂದೆ ಶರಣಾದರು.

ಜಾಮೀನು ಅವಧಿ ಮುಗಿಯುವ ಒಂದು ದಿನ ಮುಂಚಿತವಾಗಿ ಮಿಶ್ರಾ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.2021ರ ಫೆಬ್ರುವರಿಯಲ್ಲಿ ಅಲಹಾಬಾದ್ ಹೈಕೋರ್ಟ್‌ ಆಶಿಶ್‌ ಮಿಶ್ರಾ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಆಶಿಶ್ ಮಿಶ್ರಾ ಅವರ ಜಾಮೀನು ರದ್ದುಗೊಳಿಸಬೇಕು ಎಂದು ಕೋರಿ ರೈತರು ಸಲ್ಲಿಸಿದ್ದ ಅರ್ಜಿಯನ್ನು ಏಪ್ರಿಲ್ 4ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ತೀರ್ಪನ್ನು ಕಾಯ್ದಿರಿಸಿತ್ತು. ಬಳಿಕ ಏ.18ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಅವರ ನೇತೃತ್ವದ ಪೀಠ, ಮಿಶ್ರಾ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ರದ್ದುಪಡಿಸಿತ್ತು ಮತ್ತು ಒಂದು ವಾರದೊಳಗೆ ಶರಣಾಗುವಂತೆ ಹೇಳಿತ್ತು.

ಕಳೆದ ವರ್ಷದ ಅಕ್ಟೋಬರ್ 3ರಂದು ನಡೆದಿದ್ದ ಲಖಿಂಪುರ ಖೇರಿ ಹಿಂಸಾಚಾರ ಘಟನೆಯಲ್ಲಿ ಪ್ರತಿಭಟನನಿರತ ನಾಲ್ವರು ರೈತರು ಸೇರಿದಂತೆ 8 ಮಂದಿ ಬಲಿಯಾಗಿದ್ದರು. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರು ಪ್ರಮುಖ ಆರೋಪಿಯಾಗಿದ್ದಾರೆ.

Join Whatsapp
Exit mobile version