ಹಾಸನ: ರಾಜಧಾನಿಯನ್ನು ಕರಾವಳಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ಮತ್ತೆ ಭೂಕುಸಿತ ಉಂಟಾಗಿದೆ.
ಈ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಮಾರನಹಳ್ಳಿಯಿಂದ ಗುಂಡ್ಯವರೆಗೆ ಮಾರ್ಗದಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಹಗಲು ಹೊತ್ತಿನಲ್ಲಿ ಭಾರವಾದ ವಾಹನಗಳನ್ನು ಹೊರತುಪಡಿಸಿ ಉಳಿದೆಲ್ಲಾ ವಾಹನಗಳು ಸಂಚರಿಸಬಹುದು. ರಾತ್ರಿ ವೇಳೆ ತುರ್ತು ವಾಹನಗಳು ಮಾತ್ರ ಈ ಮಾರ್ಗದಲ್ಲಿ ಸಂಚರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸೂಚನೆ ಹೊರಡಿಸಿದೆ. ಈ ಮಾರ್ಗಕ್ಕೆ ಪರ್ಯಾಯವಾಗಿ ವಾಹನಗಳು ಹಾಸನ-ಅರಕಲಗೂಡು-ಕೊಣನೂರು-ಕುಶಾಲನಗರ-ಮಡಿಕೇರಿ ಮಾರ್ಗವಾಗಿ ಮಂಗಳೂರಿಗೆ ಹೋಗಬಹುದಾಗಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಕಲೇಶಪುರ ಉಪ ವಿಭಾಗಾಧಿಕಾರಿ ಪ್ರತೀಕ್ ಭಾಯಲ್, ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಈ ಸ್ಥಳವನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಕಳೆದ ವರ್ಷವೂ ಇಲ್ಲಿ ಭೂಕುಸಿತ ಉಂಟಾಗಿತ್ತು. ಈ ಬಾರಿಯೂ ಮಳೆ ಸುರಿಯುತ್ತಿರುವುದರಿಂದ ಮೇಲ್ಭಾಗದಿಂದ ನೀರು ಹರಿದು ಬರುತ್ತಿದೆ. ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಭೂಕುಸಿತ ಉಂಟಾಗುತ್ತಿದೆ ಎಂದು ತಿಳಿಸಿದರು.
ಎಲ್ಲಾ ರೀತಿಯ ಭಾರಿ ಸರಕು ಸಾಗಣೆ ವಾಹನಗಳ ಸಂಚಾರವನ್ನು ಈ ಪ್ರದೇಶದಲ್ಲಿ ನಿರ್ಬಂಧಿಸಲಾಗಿದೆ. ಅಲ್ಲದೇ ಈ ಸ್ಥಳದಲ್ಲಿ ಚೆಕ್ಪೋಸ್ಟ್ ಮಾದರಿಯಲ್ಲಿ ಪೊಲೀಸರು, ಹೆದ್ದಾರಿ ಇಲಾಖೆಯ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಭೂಕುಸಿತ ಆಗುತ್ತಿರುವ ಸ್ಥಳದಲ್ಲಿ ಏಕಮುಖ ಸಂಚಾರ ಇರಲಿದೆ. ಒಂದು ಬದಿಯ ವಾಹನಗಳು ಸಾಗಿದ ನಂತರ ಇನ್ನೊಂದು ಬದಿಯ ವಾಹನಗಳು ಸಂಚರಿಸಲು ಅವಕಾಶ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಇದು ಸೂಕ್ಷ್ಮ ಪ್ರದೇಶವಾಗಿದ್ದು, ತಜ್ಞರ ಸಮಿತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಿದೆ. ಸಮಿತಿ ವರದಿ ನೀಡುವವರೆಗೆ ಈ ಸ್ಥಳದಲ್ಲಿ ಸಂಚಾರವನ್ನು ನಿಯಂತ್ರಿಸುವುದು ಅಗತ್ಯವಾಗಿದೆ ಎಂದರು.
ನಾಲ್ಕೈದು ದಿನಗಳ ಹಿಂದಷ್ಟೇ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಯಾವುದೇ ಕಾರಣಕ್ಕೂ ವಾಹನ ಸಂಚಾರ ಬಂದ್ ಮಾಡುವುದಿಲ್ಲ ಎಂದು ಹೇಳಿದ್ದರು. ಇದೀಗ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದ್ದು, ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ. ಕಳೆದ ವರ್ಷವೂ ಇದೇ ಸ್ಥಳದಲ್ಲಿ ಭೂಕುಸಿತ ಉಂಟಾಗಿತ್ತು. ಶಾಶ್ವತ ತಡೆಗೋಡೆ ನಿರ್ಮಾಣ ಮಾಡದ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಇದೀಗ ಮತ್ತೊಮ್ಮೆ ಭೂಕುಸಿತ ಆಗಿದೆ. ಇದರಿಂದ ವಾಹನ ಸಂಚಾರ ಸ್ಥಗಿತ ಆಗುವಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.