ಬೆಂಗಳೂರು : ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟಿದ್ದರೂ, ವಿಧಾನಪರಿಷತ್ ನಲ್ಲಿ ಕಾನೂನು ಅಂಗೀಕಾರಕ್ಕೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ, ರಾಜ್ಯ ಸರಕಾರ ಗೋಹತ್ಯೆ ನಿಷೇಧ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿದೆ. ಈ ಕುರಿತ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ ಎಂದು ವರದಿಗಳು ತಿಳಿಸಿವೆ.
ವಿಧಾನಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕಾರ ಮಾಡಲಾಗಿತ್ತು. ಇಂತಹ ಕಾಯ್ದೆ ಪರಿಷತ್ ನಲ್ಲಿ ಅಂಗೀಕರಿಸುವ ಮುನ್ನವೇ ಅನಿರ್ದಿಷ್ಠಾವಧಿಗೆ ಮುಂದೂಡಲ್ಪಟ್ಟಿತ್ತು.
ಹೀಗಾಗಿ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಇದೀಗ ಈ ಕಾನೂನಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಂಡಿದೆ.
ರಾಜ್ಯದಲ್ಲಿ ಇನ್ನು ಮುಂದೆ ಗೋಹತ್ಯೆ ನಿಷೇಧಗೊಂಡಂತೆ ಆಗಿದೆ. ಗೋಹತ್ಯೆಗೆ ಈ ಕಾನೂನಿನಲ್ಲಿ ಕಠಿಣ ಶಿಕ್ಷೆಯನ್ನು ವಿಧಿಸಲಾಗುತ್ತದೆ.