ಎಂ.ಬಿ.ಪಾಟೀಲರು ಆರೋಪ ಸಾಬೀತು ಪಡಿಸಲಿ, ಇಲ್ಲವೇ ಬಹಿರಂಗ ಕ್ಷಮೆ ಯಾಚಿಸಲಿ: ಗೋವಿಂದ ಕಾರಜೋಳ

Prasthutha|

ಬೆಂಗಳೂರು: ‘ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ಎಂಬ ಕಾಂಗ್ರೆಸ್ ನವರ ಪಾದಯಾತ್ರೆ ಹಾನಗಲ್ ಮತ್ತು ಸಿಂಧಗಿ ಮತಕ್ಷೇತ್ರಗಳ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಒಂದು ಚುನಾವಣಾ ಗಿಮಿಕ್, ಇಂತಹ ಚುನಾವಣಾ ಗಿಮಿಕ್ ಗಳಿಗೆ ಜನ ಮೋಸ ಹೋಗುವುದಿಲ್ಲ. ತಂತ್ರಗಾರಿಕೆಗಳಿಂದ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದಿಲ್ಲಿ ಹೇಳಿದರು.

- Advertisement -


ವಿಧಾನಸೌಧದಲ್ಲಿ ಇಂದು ಅವರನ್ನು ಭೆಟ್ಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಭಾರತೀಯ ಜನತಾ ಪಕ್ಷ ಯಾವಾಗಲೂ ‘ಕೃಷ್ಣೆಯ ನಡಿಗೆ ಸತ್ಯದ ಕಡೆಗೆ ಎಂಬುದನ್ನು ಪರಿಪಾಲಿಸುತ್ತಾ ಬಂದಿದ್ದು ಉಪಚುನಾವಣೆ ಇರಲಿಲ್ಲ ಎಂದಿದ್ದರೆ ಕಾಂಗ್ರೆಸ್ ನವರ ‘ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ಇರುತ್ತಿರಲಿಲ್ಲ. ಅದು ನಿರ್ಲಕ್ಷ್ಯದ ಕಡೆಗೆ ಇರುತ್ತಿತ್ತು ಎಂದು ಸಚಿವರು ಚುಚ್ಚಿದರು.
ಮಾಜಿ ನೀರಾವರಿ ಸಚಿವ ಎಂ.ಬಿ. ಪಾಟೀಲರು ನಾನು “ಕೃಷ್ಣೆ ಕಾಂಗ್ರೆಸ್ ನವರ ಪಾಪದ ಕೂಸು”ಎಂದು ಹೇಳಿದ್ದೇನೆಂದು ಸುಳ್ಳು ಹೇಳಿದ್ದಾರೆ. ನಾನು ಯಾವತ್ತೂ ಹೇಳಿಲ್ಲ ಮತ್ತು ಹೇಳುವವನೂ ಅಲ್ಲ. ನಾನು ಈ ರೀತಿ ಹೇಳಿದ್ದೇನೆಂದು ಎಂ.ಬಿ.ಪಾಟೀಲರು ಸಾಬೀತು ಪಡಿಸಬೇಕು. ಇಲ್ಲದಿದ್ದರೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಸಚಿವರು ಒತ್ತಾಯಿಸಿದರು.


ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯಾನಂತರ ಕಾಂಗ್ರೆಸ್ ನವರು ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಯಾವುದೇ ರೀತಿಯ ಸಮರ್ಪಕ ಹಣಕಾಸು ಒದಗಿಸಲಿಲ್ಲ. ಆದ್ದರಿಂದಾಗಿ ಈ ಯೋಜನೆಗಳು ಕುಂಟುಂತ್ತಾ ತೆವಳುತ್ತಾ ಜನರಿಗೆ ಯಾವುದೇ ರೀತಿಯ ಸಹಾಯವಾಗದ ರೀತಿಯಲ್ಲಿ ಮುನ್ನಡೆದವು ಎಂದು ಕಾರಜೋಳ ಹೇಳಿದರು.

Join Whatsapp