ಸ್ಥಳೀಯ ಸಂಸ್ಥೆಗಳ ಚುನಾವಣೆಫಲಿತಾಂಶ ಗಮನಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆಯಿರುವುದು ಸ್ಪಷ್ಟ: ಸಿದ್ದರಾಮಯ್ಯ

Prasthutha|

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಗಮನಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

- Advertisement -

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಇಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವುದು ನೂರಕ್ಕೆ ನೂರು ಖಚಿತ ಎಂದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಇಂದು ಹೊರಬಿದ್ದಿದೆ. ಚುನಾವಣೆಯಾದ 1187 ಸ್ಥಾನಗಳ ಪೈಕಿ 500 ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆದ್ದಿದೆ. ಫಲಿತಾಂಶದಿಂದ ಜನಾಭಿಪ್ರಾಯ ನಮ್ಮ ಪರವಾಗಿದೆ ಎಂಬುದು ಕಂಡು ಬರುತ್ತದೆ. ಈ ಫಲಿತಾಂಶ ನಮಗೆ ಖುಷಿ ಕೊಟ್ಟಿದೆ ಎಂದರು.

- Advertisement -

ಚುನಾವಣೆಯಲ್ಲಿ ಹಣ ಖರ್ಚು ಮಾಡಿ ಗೆಲ್ಲುತ್ತೇವೆ ಎಂದು ಬಿಜೆಪಿಯವರು ಜಂಭದಿಂದ ವರ್ತಿಸುತ್ತಾರೆ, ಆದರೆ ಬರೀ ಹಣವೊಂದೆ ಚುನಾವಣೆಯಲ್ಲಿ ಗೆಲ್ಲಲು ಸಾಕಾಗಲ್ಲ. ಜನರ ಪರವಾಗಿ ಕೆಲಸ ಮಾಡಬೇಕು, ಪ್ರಾಮಾಣಿಕ ಆಡಳಿತ ಕೊಡಬೇಕು. ಆಗ ಜನ ಮತ ನೀಡುತ್ತಾರೆ ಎಂದು ಹೇಳಿದರು.

ಈ ಹಿಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಮತ್ತು ಬಿಜೆಪಿ ಎರಡೂ ಪಕ್ಷಗಳು ತಲಾ ಹನ್ನೊಂದು ಸ್ಥಾನಗಳನ್ನು ಗೆದ್ದಿದ್ದರೂ ಶೇಕಡಾವಾರು ಮತಗಳ ಪ್ರಮಾಣ ನಮಗೆ ಹೆಚ್ಚು ಬಂದಿದೆ. ನಮಗೆ 48% ಮತ ಬಂದಿದ್ದರೆ, ಬಿಜೆಪಿ ಗೆ 41% ಬಂದಿತ್ತು. ಡಿಸೆಂಬರ್ 27 ರಂದು 1187 ಸ್ಥಾನಗಳಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷ 500 ಕ್ಕೂ ಅಧಿಕ ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 430, ಜೆ.ಡಿ.ಎಸ್ 45, ಇತರೆ 207 ಸ್ಥಾನಗಳನ್ನು ಗೆದ್ದಿದ್ದಾರೆ. ಈ ಫಲಿತಾಂಶದಿಂದ ಬಿಜೆಪಿಯ ವಿರುದ್ಧ ಜನಾಭಿಪ್ರಾಯ ಇದೆ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಎಂದು ಜನ ಭಾವಿಸಿರುವುದು ಕಾಣುತ್ತದೆ ಎಂದು ಸಿದ್ದರಾಮಯ್ಯ ವ್ಯಾಖ್ಯಾನಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶವನ್ನು ನಾನು ಯಾವಾಗಲೂ ಮುಂದಿನ ಚುನಾವಣೆಗಳ ದಿಕ್ಸೂಚಿ ಎಂದು ಹೇಳಲ್ಲ. ಆದರೆ ಇದರಿಂದ ಜನರ ಒಲವು ಯಾರ ಕಡೆಗಿದೆ ಎಂದು ತಿಳಿಯುತ್ತೆ ಎಂಬುದು ನನ್ನ ಅಭಿಪ್ರಾಯ. ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತದಿಂದ ಜನ ರೋಸಿ ಹೋಗಿದ್ದಾರೆ. ಭ್ರಷ್ಟಾಚಾರ ಮಿತಿಮೀರಿದೆ, ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಇದರಿಂದ ಜನರ ನಿರೀಕ್ಷೆ ಹುಸಿಯಾಗಿದೆ. ಹೀಗಾಗಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ ಎಂದು ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ, ಮತ ನೀಡಿದ ಎಲ್ಲಾ ಮತದಾರರಿಗೆ ಮತ್ತು ಅಭ್ಯರ್ಥಿಗಳ ಪರವಾಗಿ ದುಡಿದ ಎಲ್ಲಾ ನಾಯಕರು, ಕಾರ್ಯಕರ್ತರಿಗೆ ವೈಯಕ್ತಿಕವಾಗಿ ಮತ್ತು ಪಕ್ಷದ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ. ಗೆದ್ದಿರುವ ಅಭ್ಯರ್ಥಿಗಳಿಗೆ ಅಭಿನಂದನೆಗಳು ಎಂದು ಸಿದ್ದರಾಮಯ್ಯ ತಿಳಿಸಿದರು.

ಪಕ್ಷ ಇಂದು ಪ್ರಬಲ ಸಂಘಟನೆಯಾಗಿ ಬೆಳೆಯುತ್ತಿದೆ. ಇದನ್ನು ನಾವು ಹೀಗೆಯೇ ಮುಂದುವರೆಸಿಕೊಂಡು ಹೋಗುತ್ತೇವೆ ಜೊತೆಗೆ ಕಾಂಗ್ರೆಸ್ ಪಕ್ಷ ನಮಗೆ ಬೇಕು ಎಂದು ಜನರೇ ಬಯಸುತ್ತಿದ್ದಾರೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ನೂರಕ್ಕೆ ನೂರು ಬಹುಮತ ಪಡೆದು ಅಧಿಕಾರ ಹಿಡಿಯುತ್ತದೆ. ಹಿಂದೂ ದೇವಾಲಯಗಳನ್ನು ಸರ್ಕಾರ ಅಭಿವೃದ್ಧಿ ಪಡಿಸುವ ಕೆಲಸ ಮಾಡಿದರೆ ನಮ್ಮ ತಕರಾರು ಖಂಡಿತಾ ಇಲ್ಲ. ಸಾರಾಸಗಟಾಗಿ ಎಲ್ಲಾ ದೇವಾಲಯಗಳನ್ನು ಸ್ವತಂತ್ರಗೊಳಿಸುವ ಮೊದಲು ದೇವಾಲಯಗಳ ಆರ್ಥಿಕ ಪರಿಸ್ಥಿತಿಯನ್ನು ಒಮ್ಮೆ ಪರಿಶೀಲಿಸಬೇಕು. ಕಾರಣ ರಾಜ್ಯದ ಸಾಕಷ್ಟು ದೇವಾಲಯಗಳು ಆರ್ಥಿಕವಾಗಿ ಸಂಕಷ್ಟದಲ್ಲಿವೆ, ಅವುಗಳನ್ನು ಸ್ವತಂತ್ರಗೊಳಿಸಿದರೆ ದೇವಾಲಯ ನಡೆಸಿಕೊಂಡು ಹೋಗುವುದು ಕಷ್ಟವಾಗಿ ಉಪಕಾರಕ್ಕಿಂತ ತೊಂದರೆಯೇ ಹೆಚ್ಚಾಗುತ್ತದೆ. ಜನರನ್ನು ಭಾವನಾತ್ಮಕವಾಗಿ ಹಾದಿ ತಪ್ಪಿಸಲು ಸರ್ಕಾರ ಎಷ್ಟೇ ಪ್ರಯತ್ನ ಮಾಡಿದರೂ ಜನರು ಬುದ್ದಿವಂತರಿದ್ದಾರೆ. ತಾವೇನು ತೀರ್ಮಾನ ಮಾಡಬೇಕು ಅದನ್ನೇ ಜನ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Join Whatsapp