ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ನಾಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ನಾಳೆ (ಶುಕ್ರವಾರ) ಬೆಳಿಗ್ಗೆ 10.30 ಗಂಟೆಗೆ ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, MLC ಕೆ.ಹರೀಶ್ ಕುಮಾರ್ ಸುದ್ದಿಗೋಷ್ಠಿ ಕರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ರಾಜೀನಾಮೆ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಕಳೆದೆರಡು ವಿಧನಾಸಭಾ ಚುನಾವಣೆ ಮತ್ತು ಈ ಸಲದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧ್ಯಕ್ಷರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂಬ ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಮಾಧ್ಯಮಗಳಲ್ಲಿ ಆಗ್ರಹಿಸುತ್ತಿದ್ದಾರೆ. ಹರೀಶ್ ಕುಮಾರ್ ಅವರನ್ನು ಕಾರ್ಯಕರ್ತರು ಕಾಲ್ ಮಾಡಿ ತರಾಟೆಗೆ ತೆಗೆದುಕೊಂಡಿರುವ ಆಡಿಯೋಗಳು ವೈರಲ್ ಆಗಿವೆ. ಇದರಿಂದ ಮನನೊಂದಿರುವ ಹರೀಶ್ ಕುಮಾರ್ ಅವರು ಪದತ್ಯಾಗಕ್ಕೆ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಅಭ್ಯರ್ಥಿ ಎಂದೇ ಬಿಂಬಿತವಾಗಿದ್ದ ಪದ್ಮರಾಜ್ ಪೂಜಾರಿ ಸೋತಿರುವ ಬಗ್ಗೆ ಪರಾಮರ್ಶೆ ನಡೆಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು, ಈ ಸೋಲಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ನಾಯಕರನ್ನು ಹೊಣೆ ಮಾಡಿದ್ದಾರೆ. ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಎರಡು ವಿಧಾನಸಭೆ ಚುನಾವಣೆ ಮತ್ತು ಎರಡು ಲೋಕಸಭಾ ಚುನಾವಣೆಯಲ್ಲಿ ಸೋತಿದೆ. ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಪಕ್ಷದ ನೆಲಕಚ್ಚುತ್ತಿದೆ ಎಂದು ಅಸಮಾಧಾನ ಭುಗಿಲೆದ್ದಿವೆ. ಪದ್ಮರಾಜ್ ಪೂಜಾರಿ ಸೋಲಿಗೆ ದ.ಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೊಣೆ ಹೊರಬೇಕು. ಹರೀಶ್ ಕುಮಾರ್ ಅವರ ಬೂತ್‌ನಲ್ಲಿಯೇ ಕಾಂಗ್ರೆಸ್ ಹಿನ್ನಡೆ ಪಡೆದಿದೆ. ಸೋಲಿನ ನೈತಿಕ ಹೊಣೆಹೊತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹರೀಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹರೀಶ್ ಕುಮಾರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಪ್ರಕಟಿಸಲು ಪತ್ರಿಕಾಗೋಷ್ಠಿ ಕರೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.