ಬೆಂಗಳೂರು: ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಕಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
ರಾಜ್ಯದಲ್ಲಿ 1265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದರಸಾಗಳಿದ್ದು, ಆ ಪೈಕಿ 100 ಮದರಸಾಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲ ಮದರಸಾಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶ ಸಿಗಲಿದೆ ಎಂದು ಹೇಳಿದರು.