ಹೈದರಾಬಾದ್: ಖಾರ್ಗೋನ್ ನಲ್ಲಿ ನಡೆದ ರಾಮನವಮಿ ಮೆರವಣಿಗೆ ವೇಳೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳ ಮನೆಗಳನ್ನು ಧ್ವಂಸಗೊಳಿಸಿದ್ದಕ್ಕಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ವಾಗ್ದಾಳಿ ನಡೆಸಿದ ಎಐಎಂಐಎಂ ಮುಖ್ಯಸ್ಥ, ಸಂಸದ ಅಸದುದ್ದೀನ್ ಉವೈಸಿ, ಮುಸ್ಲಿಮರ ವಿರುದ್ಧ ಅವರು ಪಕ್ಷಪಾತ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸ್ಪಷ್ಟವಾದ ಸರ್ಕಾರಿ ಪ್ರಾಯೋಜಿತ ಹಿಂಸಾಚಾರ ಮತ್ತು ಜಿನೀವಾ ಒಪ್ಪಂದದ ಗಂಭೀರ ಉಲ್ಲಂಘನೆಯಾಗಿದೆ. ಮೆರವಣಿಗೆಗೆ ಸರ್ಕಾರ ಅನುಮತಿ ನೀಡುತ್ತದೆ. ಮೆರವಣಿಗೆಯಲ್ಲಿ ಹಿಂಸಾಚಾರಕ್ಕೆ ಸರ್ಕಾರ ಹೇಗೆ ಅವಕಾಶ ನೀಡುತ್ತದೆ ಎಂದು ಅವರು ಪ್ರಶ್ನಿಸಿದ್ದಾರೆ.
ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಮನೆ, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಮಧ್ಯಪ್ರದೇಶದ ಸರ್ಕಾರ ಯಾವ ಕಾನೂನಿನ ಅಡಿಯಲ್ಲಿ ಮುಸ್ಲಿಂ ಸಮುದಾಯದ ಮನೆಗಳನ್ನು ನೆಲಸಮ ಮಾಡಿದೆ? ಇದು ಮುಸ್ಲಿಮರ ಬಗ್ಗೆ ಮುಖ್ಯಮಂತ್ರಿ ಅವರ ಪಕ್ಷಪಾತ ಧೋರಣೆಯನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಮುಖವಾಗಿ, ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ, ಖಾರ್ಗೋನ್ ಜಿಲ್ಲಾಡಳಿತ ಮತ್ತು ಪೊಲೀಸರು ರಾಮನವಮಿ ಮೆರವಣಿಗೆಯ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದ್ದಾರೆ. ಅಧಿಕಾರಿಗಳು ಸುಮಾರು 45 ಮನೆಗಳು ಮತ್ತು ಅಂಗಡಿಗಳ ಮೇಲೆ ಬುಲ್ಡೋಜರ್ ಅನ್ನು ಹತ್ತಿಸಿದ್ದಾರೆ. ಸೋಮವಾರ ಸುಮಾರು 16 ಮನೆಗಳು ಮತ್ತು 29 ಅಂಗಡಿಗಳನ್ನು ನೆಲಸಮಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.