ಬೆಳಗಾವಿ: ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿರುವ ‘ಕರಾಳ ದಿನಾಚರಣೆ’ಗೆ ಸರ್ಕಾರದ ಪ್ರತಿನಿಧಿಯನ್ನು ಕಳುಹಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹೇಳಿದ್ದು, ಇದಕ್ಕೆ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಒಂದು ರಾಜ್ಯದ ಸಿಎಂ ಆಗಿ ಶಿಂಧೆ ಕನ್ನಡಿಗರ ವಿರುದ್ಧ ದಂಗೆ ಹಾಗೂ ಹಿಂಸಾತ್ಮಕ ಚಟುವಟಿಕೆಗಳಿಗೆ ಪ್ರಚೋದನೆ ನೀಡಿದ್ದಾರೆ ಎಂದ ಅಶೋಕ ಚಂದರಗಿ, ಇದಕ್ಕೆ ನಮ್ಮ ಯಾವೊಬ್ಬ ಜನಪ್ರತಿನಿಧಿಯೂ ಚಕಾರವೆತ್ತಿಲ್ಲ ಏಕೆ ಎಂದು ಪ್ರಶ್ನಿಸಿದ್ದಾರೆ.
ಈ ಪ್ರವೃತ್ತಿ ಸರಿಯಲ್ಲ. ಮಹಾರಾಷ್ಟ್ರದ ನಾಯಕರು ನಗರ ಪ್ರವೇಶ ಮಾಡದಂತೆ ಎಚ್ಚರಿಕೆ ವಹಿಸಬೇಕು ಎಂದೂ ಅಶೋಕ ಚಂದರಗಿ ಆಗ್ರಹಿಸಿದ್ದಾರೆ.
ಈಚೆಗೆ ಬೆಳಗಾವಿಯಲ್ಲಿ ಕನ್ನಡ ಸಂಘಟನೆಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಯಾವುದೇ ಕಾರಣಕ್ಕೂ ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ. ಕಾನೂನು ಉಲ್ಲಂಘಿಸಿದರೆ ದಿಟ್ಟ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಆದರೂ ಎಂಇಎಸ್ ಮುಖಂಡರು ಕರಾಳ ದಿನಾಚರಣೆಗೆ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.