ಅ.20ರಂದು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ: ಬಿ. ಶ್ರೀರಾಮುಲು

Prasthutha|

ಬೆಂಗಳೂರು: ರಾಜ್ಯಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.20ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ ಎಂದು ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

- Advertisement -


ವಿಧಾನಸೌಧದಲ್ಲಿಂದು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 10.30ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಿದ್ದಾರೆ. ಈ ವರ್ಷ ಐವರು ಸಾಧಕರಿಗೆ ಹಾಗೂ ಕಳೆದ ಸಾಲಿಗೆ ಐವರು ಸಾಧಕರಿಗೆ ಪ್ರಶಸ್ತಿ ಯನ್ನು ನೀಡಿ ಗೌರವಿಸಲಾಗುವುದು. ಈಗಾಗಲೇ ಪ್ರಶಸ್ತಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ನಿಯಮಾನುಸಾರ ಅರ್ಹ ಸಾಧಕರನ್ನು ಸಮಿತಿಯು ಆಯ್ಕೆ ಮಾಡಲಿದೆ.

ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನ ನಂದಪುರಿ ಮಹಾಸ್ಬಾಮಿಗಳು ಸಾನಿಧ್ಯ ವಹಿಸಲಿದ್ದಾರೆ. ಅದಕ್ಕೂ ಮುನ್ನ ಶಾಸಕರ ಭವನದ ಮುಂಭಾಗದಲ್ಲಿರುವ ಮಹರ್ಷಿ ವಾಲ್ಮೀಕಿ ತಪೋವನದಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಲ್ಲಿಸಲಾಗುವುದು. ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಮಾಡಲಾಗುವುದು ಎಂದು ತಿಳಿಸಿದರು.

- Advertisement -


ಪರಿಶಿಷ್ಟ ಪಂಗಡಗಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದ್ದು, ಪರಿಶಿಷ್ಟ ವರ್ಗಗಳ ಅಭಿವೃದ್ಧಿಯ ಮೇಲುಸ್ತುವಾರಿ ಗಾಗಿ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಎನ್. ನಾಗಾಂಬಿಕ ದೇವಿ ಮತ್ತು ನಿರ್ದೇಶಕರಾದ ಶ್ರೀ ಪಿ.ಎಸ್. ಕಾಂತರಾಜು ಅವರು ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದರು.


ಸಭೆಯಲ್ಲಿ ಸಂಸದರಾದ ಶ್ರೀ ರಾಜ ಅಮರೇಶ ನಾಯಕ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ವಿ.ರಾಮಚಂದ್ರಪ್ಪ, ಶಾಸಕರಾದ ಶ್ರೀ ಇ.ತುಕಾರಾಮ್, ರಘುಮೂರ್ತಿ, ವಿಧಾನ ಪರಿಷತ್ ಸದಸ್ಯರಾದ ಶಾಂತರಾಂ ಬುದ್ನಸಿದ್ದಿ , ಸಮುದಾಯದ ವಿವಿಧ ಮುಖಂಡರು ಸಲಹೆಗಳನ್ನು ನೀಡಿದರು.ಸಭೆಯಲ್ಲಿ ಉಪಕಾರ್ಯದರ್ಶಿ ಶಂಭುಲಿಂಗಯ್ಯ, ಸಚಿವರ ಆಪ್ತಕಾರ್ಯದರ್ಶಿ ರಾಘವೇಂದ್ರ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕವಿತಾ ವಾರಂಗಲ್, ಪ್ರಧಾನ ವ್ಯವಸ್ಥಾಪಕರಾದ ರಾಜು, ಉಪನಿರ್ದೇಶಕರಾದ ರಾಜಕುಮಾರ್, ರಾಜಶೇಖರ್ ಮತ್ತಿತರರು ಉಪಸ್ಥಿತರಿದ್ದರು

Join Whatsapp