ಹಿಜಾಬ್ ವಿಷಯದಲ್ಲಿ ಯಥಾಸ್ಥಿತಿ ಕಾಪಾಡಿ: ಅಲ್ಪಸಂಖ್ಯಾತ ಆಯೋಗ ಸೂಚನೆ

Prasthutha|

ಬೆಂಗಳೂರು: ಹಿಜಾಬ್ ಧರಿಸಿದ್ದ ಕಾರಣಕ್ಕೆ ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಹೊರಗೆ ಹಾಕಿರುವ ಬಗ್ಗೆ ಆಯೋಗಕ್ಕೆ ದೂರು ಬಂದಿದ್ದು, ನ್ಯಾಯಾಲಯದ ತೀರ್ಪು ಬರುವವರೆಗೆ ಯಥಾಸ್ಥಿತಿ ಕಾಪಾಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ, ಶಿಕ್ಷಣ ಇಲಾಖೆಗೆ ಸೂಚನೆ ನೀಡಿದೆ.

- Advertisement -

ಹಿಜಾಬ್ (ಶಿರವಸ್ತ್ರ) ಧರಿಸಿದ್ದ ಕಾರಣಕ್ಕಾಗಿ ವಿದ್ಯಾರ್ಥಿನಿಯರಿಗೆ ಕೆಲವು ದಿನಗಳಿಂದ ಪ್ರವೇಶ ನಿರಾಕರಿಸಿ ಹೊರಗಡೆ ನಿಲ್ಲಿಸಿರುವ ಘಟನೆ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿರುವುದಾಗಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗಕ್ಕೆ ವರದಿಯಾಗಿದೆ. ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿಯ ಆರು ಮಂದಿ ವಿದ್ಯಾರ್ಥಿಗಳು ಕೆಲವು ದಿನಗಳಿಂದ ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರುತ್ತಿದ್ದು, ಈ ಕಾರಣಕ್ಕೆ ಪ್ರಾಂಶುಪಾಲರು ವಿದ್ಯಾರ್ಥಿನಿಯರ ತರಗತಿ ಪ್ರವೇಶಕ್ಕೆ ನಿರಾಕರಿಸಿ ಹೊರಗಡೆ ನಿಲ್ಲಿಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ತಮ್ಮ ಧಾರ್ಮಿಕ ಹಕ್ಕನ್ನು ಗೌರವಿಸಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಅವಕಾಶ ಕಲ್ಪಿಸಬೇಕು ಎಂದು ವಿದ್ಯಾರ್ಥಿನಿಯರು ಕೋರಿರುತ್ತಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಕ್ರಮವನ್ನು ಕೈಗೊಳ್ಳಲು ಸೂಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ವಿವಾದಗಳು ಮುಂದುವರೆದಿದ್ದು ಶಾಂತಿ ಸೌಹಾರ್ದತೆಗೆ ಧಕ್ಕೆ ಬಂದಿರುವುದಾಗಿ ತಿಳಿದುಬಂದಿದೆ.

- Advertisement -

ಹಿಜಾಬ್ ಧರಿಸುವ ಪ್ರಕರಣ ಈಗಾಗಲೆ ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಬಾಕಿ ಇದ್ದು , ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ ದಿನಾಂಕ 01.06.2021 ರಂದು ಪಾಲಿಸಲಾಗಿರುವ ಸಮವಸ್ತ್ರ ಸಂಹಿತೆಯನ್ನು ನ್ಯಾಯಾಲಯದ ತೀರ್ಪು ಬರುವವರೆಗೆ ಯಥಾಸ್ಥಿತಿ ಪಾಲಿಸಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಸೂಚಿಸಿದ್ದಾರೆ.



Join Whatsapp