ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಬಳಿಕ ಹೇರಲಾಗಿದ್ದ ಸೆಕ್ಷನ್ 144 ನಿಷೇಧಾಜ್ಞೆಯನ್ನು ಸಡಿಲಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದಾರೆ.
ಮಂಗಳೂರು ನಗರದಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಗೆ ಸಂಬಂಧಿಸಿದಂತೆ ಇಂದು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಫಾಝಿಲ್ ಹತ್ಯೆಯ ಹಿನ್ನೆಲೆಯಲ್ಲಿ ಅಹಿತಕರ ಘಟನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರ ಆಯುಕ್ತರು ಜುಲೈ 28 ರಿಂದ ಆಗಸ್ಟ್ 5 ರವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು.
ಈ ಮಧ್ಯೆ ಮಂಗಳೂರು ನಗರ ಸಹಜ ಸ್ಥಿತಿಗೆ ಬರುತ್ತಿರುವ ಕಾರಣ ಆಗಸ್ಟ್ 5ರ ಬಳಿಕ ಹಂತ ಹಂತವಾಗಿ ನಿಷೇಧಾಜ್ಞೆಯನ್ನು ಸಡಿಲಗೊಳಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಿಷೇಧಾಜ್ಞೆಯನ್ನು ಸಡಿಲಿಸಿದ ಬಳಿಕ ಒಂದು ವಾರದ ಕಾಲ ಬೈಕ್’ನಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ಹೇರಲಾಗಿದೆ. ಈ ವೇಳೆ ಮಕ್ಕಳು, ಹಿರಿಯರು ಬೈಕ್’ನಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಯುವಕರು ಹಿಂಬದಿ ಸವಾರರಾಗಿ ಸಂಚರಿಸದಂತೆ ಸೂಚಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿವೆ.
ಈ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.