ಮಂಗಳೂರು: ಫೇಸ್‌ಬುಕ್ ಮತ್ತು ವಾಟ್ಸಾಪ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಹಾಕಿದ ಆರೋಪದ ಮೇಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮತ್ತು ವೇಣೂರು ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಫೇಸ್‌ಬುಕ್‌ನಲ್ಲಿ ಅಶ್ಲೀಲ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಎರಡು ಪ್ರಕರಣಗಳು ದಾಖಲಾಗಿವೆ.
ಜುಲೈ 1 ರಂದು ಧರ್ಮಸ್ಥಳ ನಿವಾಸಿ ರಮೇಶ್ ಎಂಬವರು ತಮ್ಮ ಫೇಸ್‌ಬುಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾಗ, ‘Vijaya Viji’ ಎಂಬ ಖಾತೆಯಲ್ಲಿ ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ರಮೇಶ್ ನೀಡಿದ ದೂರಿನ ಮೇರೆಗೆ, ಠಾಣಾ ಅಪರಾಧ ಸಂಖ್ಯೆ 37/2025 ರಂತೆ ಭಾರತೀಯ ನ್ಯಾಯ ಸಂಹಿತೆಯ (BNS) ಕಲಂ 296 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಧರ್ಮಸ್ಥಳದ ಇನ್ನೊಬ್ಬ ನಿವಾಸಿಯಾದ ಪುರಂದರ ಗೌಡ ಎಂಬವರು ನೀಡಿದ ದೂರಿನಲ್ಲಿ, ‘Naveen Gowda’ ಎಂಬ ಫೇಸ್‌ಬುಕ್ ಖಾತೆಯಿಂದ ಅಶ್ಲೀಲ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ. ಈ ದೂರಿನ ಅನ್ವಯ, ಠಾಣಾ ಅಪರಾಧ ಸಂಖ್ಯೆ 38/2025 ರಂತೆ ಕಲಂ 296 ಬಿ.ಎನ್.ಎಸ್ ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ, ಪ್ರಧಾನಮಂತ್ರಿ ಮತ್ತು ಕೇಂದ್ರ ಗೃಹ ಸಚಿವರ ಫೋಟೋಗಳೊಂದಿಗೆ ನಗ್ನ ಮಹಿಳೆಯ ಚಿತ್ರವನ್ನು ಹಾಗೂ ಹಿಂದೂ ದೇವರುಗಳನ್ನು ಅವಮಾನಿಸುವ ಕಾರ್ಟೂನ್ ಚಿತ್ರಗಳನ್ನು ತನ್ನ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಅಜಿ.ಎಂ. ಜೋಸೆಫ್ ಎಂಬಾತನ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪೋಸ್ಟ್ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದು, ಸಮಾಜದಲ್ಲಿ ದ್ವೇಷವನ್ನು ಪ್ರಚೋದಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರಿನ ಆಧಾರದ ಮೇಲೆ ವೇಣೂರು ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಲಂ 353(2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.