Home ಟಾಪ್ ಸುದ್ದಿಗಳು ಗುತ್ತಿಗೆದಾರರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ

ಗುತ್ತಿಗೆದಾರರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಗುತ್ತಿಗೆದಾರರ ಬಾಕಿ ಮೊತ್ತ ಬಿಡುಗಡೆ, ಭ್ರಷ್ಟಾಚಾರ ನಿಯಂತ್ರಣ, ಜಿಎಸ್’ಟಿ ಗೊಂದಲ ಹಾಗೂ ಪ್ಯಾಕೇಜ್ ಪದ್ದತಿ ರದ್ದು ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಹಾಗೂ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಗುತ್ತಿಗೆದಾರರು ಬೃಹತ್ ಪ್ರತಿಭಟನೆ ನಡೆಸಿದರು.


ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಗುತ್ತಿಗೆದಾರರು, ಶೇ 40 ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿದರು.
ಸಂಘದ ಅಧ್ಯಕ್ಷ ಕೆಂಪಣ್ಣ, ಪ್ರಧಾನ ಕಾರ್ಯದರ್ಶಿ ಜೆ.ಎಂ.ರವೀಂದ್ರ ಮಾತನಾಡಿ, ಇತೀಚಿನ ವರ್ಷಗಳಲ್ಲಿ ಗುತ್ತಿಗೆದಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ನಮ್ಮ ಬೇಡಿಕೆಗಳು, ಸಮಸ್ಯೆಗಳಿಗೆ ಪ್ರತಿ ಸರ್ಕಾರಗಳು ಸ್ಪಂದಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳು ಮತ್ತು ತಾಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸುತ್ತೇವೆ. ಕಾಮಗಾರಿಗಳನ್ನು ಸ್ಥಗಿತಗೊಳಿಸುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಕೆ ನೀಡಿದರು.


ಗುತ್ತಿಗೆದಾರರಿಗೆ ವಿವಿಧ ಇಲಾಖೆಗಳಿಂದ ಬಾಕಿ ಇರುವ 2500 ಕೋಟಿ ರೂಪಾಯಿ ಹಣ ಶೀಘ್ರದಲ್ಲೇ ಬಿಡುಗಡೆಗೊಳಿಸಬೇಕು. ಕಾಮಗಾರಿಗಳ ಒಟ್ಟು ಮೊತ್ತದ ಶೇ.30-40ರಷ್ಟು ಹಣ ವಿವಿಧ ರೂಪದಲ್ಲಿ ಸೋರಿಕೆಯಾಗುತ್ತಿದ್ದು, ಬಹುತೇಕ ಹಣವನ್ನು ವಿವಿಧ ವೆಚ್ಚಗಳಿಗೆ ಹೊಂದಿಸ ಬೇಕಾದ ಅನಿವಾರ್ಯತೆ ಇದೆ. ತಮಿಳುನಾಡು ಸರ್ಕಾರ ಸ್ಥಳೀಯ ಗುತ್ತಿಗೆದಾರರಿಗೆ ಮಾತ್ರ ಕಾಮಗಾರಿಗಳನ್ನು ನೀಡಲು ವಿಧಾನ ಸಭೆಯಲ್ಲಿ ಶಾಸನ ಮಾಡಿದೆ. ಮಹಾರಾಷ್ಟ್ರದಲ್ಲೂ ಕೂಡ ಗುತ್ತಿಗೆದಾರರ ಬಾಕಿಯನ್ನು ಆಯಾ ವರ್ಷವೇ ಬಿಡುಗಡೆ ಮಾಡಲು ನಿಯಮ ರೂಪಿಸಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲಿ ಕಾನೂನು ರೂಪಿಸಬೇಕು ಎಂದು ಆಗ್ರಹಿಸಿದರು.


ಕಾರ್ಯಾಧ್ಯಕ್ಷ ಆರ್.ಮಂಜುನಾಥ್, ಉಪಾಧ್ಯಕ್ಷ ವಿ.ಕೃಷ್ಣಾರೆಡ್ಡಿ, ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯಂ, ಅಂಬಿಕಾ ಪತಿ, ಮತ್ತಿತರರು ಹಾಜರಿದ್ದರು.

Join Whatsapp
Exit mobile version