Home ಟಾಪ್ ಸುದ್ದಿಗಳು ಮುಂದಿನ ಪೀಳಿಗೆಗೆ ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆ ಪ್ರೇರಣಾದಾಯಕವಾಗಲಿ: ಕೆ.ವಿ.ಸುರೇಶ್

ಮುಂದಿನ ಪೀಳಿಗೆಗೆ ಡಾ.ಬಿ.ಆರ್.ಅಂಬೇಡ್ಕರ್ ಚಿಂತನೆ ಪ್ರೇರಣಾದಾಯಕವಾಗಲಿ: ಕೆ.ವಿ.ಸುರೇಶ್

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಪರಿನಿರ್ವಾಣ ದಿನಚರಣೆ ನಡೆಯಿತು.
ಮಡಿಕೇರಿ ನಗರದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆದ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶ್ರೇಷ್ಠ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಕೂಡಿಗೆ ಡಯಟ್ ಪ್ರಾಂಶುಪಾಲರಾದ ಕೆ.ವಿ.ಸುರೇಶ್ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಡಯಟ್ ಪ್ರಾಂಶುಪಾಲ ಕೆ.ವಿ.ಸುರೇಶ್ , ಮುಂದಿನ ಪೀಳಿಗೆಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಪ್ರೇರಣಾದಾಯಕವಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತ್ರ ವ್ಯಕ್ತಿಯ ಅಭಿವೃದ್ಧಿ ಮತ್ತು ರಾಷ್ಟ್ರದ ಅಭ್ಯುದಯ ಸಾಧ್ಯ ಎಂದು ಅಂಬೇಡ್ಕರ್ ನಂಬಿದ್ದರು ಎಂದು ಹೇಳಿದರು.


ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಯ ಫಲವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆಗೆ ಕಾರಣೀಭೂತರಾದರು. ತಮ್ಮ ಪ್ರಖರ ಓದು ಮತ್ತು ಅಧ್ಯಯನ ಶೀಲತೆಯಿಂದ ಸಮಾಜದ ಹಿತ ಮತ್ತು ಶೋಷಿತ ವರ್ಗದ ಧ್ವನಿಯಾಗಿ ಅಂಬೇಡ್ಕರ್ ದುಡಿದಿದ್ದಾರೆ ಎಂದು ಡಯಟ್ ಪ್ರಾಂಶುಪಾಲರು ತಿಳಿಸಿದರು.


ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸ್ವಾತಂತ್ರ್ಯತ ಭಾರತದ ಪ್ರಥಮ ಕಾನೂನು ಮಂತ್ರಿಯಾಗಿ ಭಾರತದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಭಾರತ ಸಂವಿಧಾನ ರಚಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹಗಲಿರುಳು ಶ್ರಮಿಸಿದ್ದಾರೆ. ಭಾರತದ ಎಲ್ಲಾ ವರ್ಗದ ಕಟ್ಟ ಕಡೆಯ ಜನರಿಗೂ ಸಂವಿಧಾನದ ಸೌಲಭ್ಯಗಳು ತಲುಪುವಲ್ಲಿ ಶ್ರಮಿಸಿದ್ದಾರೆ ಎಂದು ಕೆ.ವಿ.ಸುರೇಶ್ ನುಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ವಿಶ್ವದ ಜ್ಞಾನಿಯಾಗಿ ಹಾಗೂ ಭಾರತ ಭಾಗ್ಯವಿಧಾತರಾಗಿ ಸದಾ ಕಣ್ಣುಮುಂದೆ ಇದ್ದಾರೆ. ಇವರ ಸಾರ್ಥಕ ಬದುಕಿನ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು. ಶೋಷಿತ ಸಮುದಾಯಗಳ ಏಳಿಗೆಗೆ ಇಡೀ ಜೀವನವನ್ನೇ ತ್ಯಾಗ ಮಾಡಿದ್ದಾರೆ ಎಂದರು.

Join Whatsapp
Exit mobile version