ಬೆಂಗಳೂರು: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಕುರಿತು ಕರ್ನಾಟಕ ಮುಖ್ಯಮಂತ್ರಿ ಬೊಮ್ಮಾಯಿ ಸರ್ವಪಕ್ಷ ಸಭೆ ನಡೆಸುವ ಕುರಿತು ಇಂಗಿತ ವ್ಯಕ್ತಪಡಿಸಿದ್ದು, ನೆರೆಯ ತಮಿಳುನಾಡು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದೆ.
ಈ ಯೋಜನೆ ಅನುಷ್ಠಾನಗೊಳಿಸಲು ನಿಟ್ಟಿನಲ್ಲಿ ಕಾನೂನು ಕುರಿತು ಚರ್ಚಿಸಲು ಶೀಘ್ರದಲ್ಲೇ ಸರ್ವಪಕ್ಷ ಸಭೆಯನ್ನು ನಡೆಸಲಾಗುವುದೆಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಅನುಷ್ಠಾನಗೊಳಿಸುವ ಸಲುವಾಗಿ ಕರ್ನಾಟಕ ಮತ್ತು ತಮಿಳುನಾಡು ಜೊತೆಗಿನ ಮಾತುಕತೆಗೆ ಒಕ್ಕೂಟ ಸರ್ಕಾರ ಸಿದ್ಧವಿದೆ ಎಂದು ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಹೇಳಿಕೆ ನೀಡಿದ್ದ ಬೆನ್ನಲ್ಲೇ, ವಿಪಕ್ಷ ನಾಯಕ ಸಿದ್ದರಾಮಯ್ಯ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಈ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ತಮಿಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್, ಅಣೆಕಟ್ಟು ಕಟ್ಟಲು ಒಂದೇ ಒಂದು ಇಟ್ಟಿಗೆ ಇಡಲು ಕರ್ನಾಟಕ ಸರ್ಕಾರಕ್ಕೆ ಅನುಮತಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಈ ಯೋಜನೆ ಅನುಷ್ಠಾನಕ್ಕೆ 1000 ಕೋಟಿಯಲ್ಲ, ಬದಲಾಗಿ 5000 ಕೋಟಿ ಮೀಸಲಿರಿಸಿದರೂ ಒಂದೇ ಒಂದು ಇಟ್ಟಿಗೆ ಇಡಲು ನಮ್ಮ ಸರ್ಕಾರ ಅನುಮತಿಸುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.