ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿ ರಚನೆ

Prasthutha|

ಬೆಳಗಾವಿ: ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 14 ಸಾವಿರ ಅತಿಥಿ ಉಪನ್ಯಾಸರ ಬೇಡಿಕೆ ಈಡೇರಿಕೆ ಕುರಿತಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾದ ವಿಧಾನ ಪರಿಷತ್ ಸದಸ್ಯರ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ಸೌಧದಲ್ಲಿಂದು ಸಭೆ ಜರುಗಿತು.
ಪಶ್ಚಿಮ ಬಂಗಾಳದಲ್ಲಿ ಅತಿಥಿ ಉಪನ್ಯಾಸಕರಿಗೆ ಉತ್ತಮ ರೀತಿಯ ಗೌರವಧನ ನೀಡಲಾಗುತ್ತಿದೆ. ಇದೇ ಮಾದರಿಯನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಅತಿಥಿ ಉಪನ್ಯಾಸಕರಿಗೆ ಗೌವರಧನ ಹೆಚ್ಚಿಸಲು, ನೇರ ನೇಮಕಾತಿಯಲ್ಲಿ ಅನುಕೂಲವಾಗುವಂತೆ ಕೃಪಾಂಕಗಳನ್ನು ನೀಡುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಸೇವಾ ಹಿರಿತನ ಆಧರಿಸಿ ಅತಿಥಿ ಉಪನ್ಯಾಸಕರಿಗೆ ಕೃಪಾಂಕಗಳನ್ನು ನೀಡಬೇಕು. ಹಂತ ಹಂತವಾಗಿ ನೇರ ನೇಮಕಾತಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಮಾತನಾಡಿ, ಯುಜಿಸಿ ನಿಮಯಗಳ ಆಧಾರದ ಮೇಲೆ ಉಪನ್ಯಾಸಕರ ನೇಮಕಾತಿ ಮಾಡಬೇಕಿದೆ. ಈಗಿರುವ ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ಒದಗಿಸುವುದರೊಂದಿಗೆ, ಕಾನೂನು ತೊಡಕುಗಳು ಆಗದಂತೆ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಪ್ರಯತ್ನಿಸಲಾಗುವುದು ಎಂದರು.
ಈ ಕುರಿತು ಉನ್ನತ ಶಿಕ್ಷಣ, ಹಣಕಾಸು, ಕಾನೂನು ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ಸಮತಿ ಒಂದು ತಿಂಗಳ ಒಳಗಾಗಿ ವರದಿ ಸಲ್ಲಿಸಲಿದೆ.
ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಅರುಣ್ ಶಹಾಪುರ, ಹನುಮಂತ ನಿರಾಣಿ, ಶ್ರೀಕಂಠೇಗೌಡ, ನಾರಾಯಣಸ್ವಾಮಿ, ಆರ್ಥಿಕ ಇಲಾಖೆ ಉಪಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಇಲಾಖೆ ಉಪಕಾರ್ಯದರ್ಶಿ ವಿ.ಟಿ.ರಾಜಶ್ರೀ, ಸಭಾಪತಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ ಮಹೇಶ್ ವಾಳ್ವೇಕರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



Join Whatsapp