ಬೆಂಗಳೂರು: ನಂದಿನಿ ಹಾಲಿನ ದರ ಏರಿಕೆಯ ಕುರಿತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘50 ವರ್ಷಗಳ ಹಿಂದೆ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದ ವಾರ್ಷಿಕೋತ್ಸವವನ್ನು ಸಂಭ್ರಮಿಸಲು ನಂದಿನಿ ಹಾಲಿನ ದರವನ್ನು ಲೀಟರ್ಗೆ ₹2 ಹೆಚ್ಚಳ ಮಾಡಿ ಕಾಂಗ್ರೆಸ್ ಸರ್ಕಾರ ವಿಕೃತ ಸಂತೋಷ ಅನುಭವಿಸುತ್ತಿದೆ’ ಎಂದು ಕಿಡಿಕಾರಿದ್ದಾರೆ.
‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನೀವು ಅಧಿಕಾರಕ್ಕೆ ಬಂದ ಕೇವಲ 13 ತಿಂಗಳಿನಲ್ಲಿ ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್ನಲ್ಲಿ ₹3 ಹೆಚ್ಚಳವಾಗಿದ್ದ ಹಾಲಿನ ಬೆಲೆ ಈಗ ಮತ್ತೊಮ್ಮೆ ₹2 ಹೆಚ್ಚಾಗಿದೆ. ರಾಜ್ಯದಲ್ಲಿನ ಬಡವರು, ಮಧ್ಯಮ ವರ್ಗದ ಜನರು ಈಗಾಗಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಗಗನಕ್ಕೇರಿರುವ ತರಕಾರಿ ಬೆಲೆಗಳಿಂದ ಕಂಗಾಲಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾಲಿನ ದರ ಏರಿಸಿ ಮತ್ತೊಮ್ಮೆ ಬಡವರ ಗಾಯದ ಮೇಲೆ ಬರೆ ಎಳೆದಿದ್ದೀರಿ’ ಎಂದು ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುರ್ತು ಪರಿಸ್ಥಿತಿ ಹೇರಿಕೆಯ ವಾರ್ಷಿಕೋತ್ಸವ ಸಂಭ್ರಮಿಸಲು @INCKarnataka ಸರ್ಕಾರ ನಂದಿನಿ ಹಾಲಿನ ದರವನ್ನ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ ಮಾಡಿ ವಿಕೃತ ಸಂತೋಷ ಅನುಭವಿಸುತ್ತಿದೆ.
— R. Ashoka (@RAshokaBJP) June 25, 2024
ಸಿಎಂ @siddaramaiah ನವರೇ, ತಾವು ಅಧಿಕಾರಕ್ಕೆ ಬಂದ ಮೇಲೆ ಕೇವಲ 13 ತಿಂಗಳಿನಲ್ಲಿ ಹಾಲಿನ ದರವನ್ನ ಎರಡು ಬಾರಿ ಹೆಚ್ಚಿಸಿದ್ದೀರಿ. ಕಳೆದ ವರ್ಷ ಆಗಸ್ಟ್… pic.twitter.com/RpF9D4eCwP