ಶಾಸಕರ ಅನುದಾನ ಪ್ರಸಕ್ತ ವರ್ಷದಲ್ಲಿಯೇ ಬಳಕೆ ಮಾಡಿ : ಸಚಿವ ಡಾ. ನಾರಾಯಣ ಗೌಡ

Prasthutha|

ಮಂಗಳೂರು : ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸರ್ಕಾರ ಶಾಸಕರುಗಳ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ನೀಡಿರುವ ಅನುದಾನಗಳನ್ನು ಪ್ರಸಕ್ತ ವರ್ಷದಲ್ಲಿಯೇ ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ. ನಾರಾಯಣ ಗೌಡ ತಿಳಿಸಿದರು.

- Advertisement -

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದ ಬಳಕೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಜಿಲ್ಲೆಯಲ್ಲಿ 3 ಜನ ವಿಧಾನ ಪರಿಷತ್ ಸದಸ್ಯರು ಹಾಗೂ 8 ಜನ ಶಾಸಕರುಗಳಿದ್ದೂ, ಪ್ರಸ್ತುತ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿಯೋಜನೆಗೆ 33 ಕೋಟಿರೂ.ಗಳ ಅನುದಾನ ಬಿಡುಗಡೆಯಾಗಿದ್ದು, ಅವುಗಳಲ್ಲಿ ಅನೇಕ ಪ್ರದೇಶಾಭಿವೃದ್ಧಿ ಕಾರ್ಯಗಳನ್ನು ಕೈಗೊಂಡು, 7 ಕೋಟಿ ಅನುದಾನ ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿದೆ. ಬಾಕಿ ಉಳಿದ 26 ಕೋಟಿ ಹಣದಲ್ಲಿ ಕೈಗೊಳ್ಳಲಾಗುವ ಕಾಮಗಾರಿಗಳ ಪ್ರಗತಿಯನ್ನು ಹೆಚ್ಚಿಸಿ ಶೀಘ್ರವಾಗಿ ಪೂರ್ಣಗೊಳಿಸುವುದರೊಂದಿಗೆ ಪ್ರತಿಶತ 100 ರಷ್ಟು ಹಣ ಬಳಕೆ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಮಾಡಬೇಕು ಎಂದರು.

- Advertisement -

ಶಾಸಕರುಗಳು ಕಚೇರಿಯಿಂದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಕ್ರಿಯಾ ಯೋಜನೆಗಳನ್ನು ರೂಪಿಸಿ ಅಧಿಕಾರಿಗಳಿಗೆ ಆಡಳಿತಾತ್ಮಕ ಅನುಮೋದನೆಗೆ ನೀಡಿದಾಗ ವಿಳಂಬವಿಲ್ಲದೇ ಮಾರ್ಗಸೂಚಿ ಪ್ರಕಾರ ಆಡಳಿತಾತ್ಮಕ ಅನುಮೋದನೆ ನೀಡಿ ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕು ಅವಕಾಶ ಮಾಡಿಕೊಡಬೇಕು ಎಂದರು.

ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕೆಲವು ಇಲಾಖೆಗಳಲ್ಲಿ ಇಂಜಿನಿಯರ್ ಕೊರತೆ ಇರುವ ಬಗ್ಗೆ ಕೇಳಿ ಬರುತ್ತಿದೆ. ಇದನ್ನು ನೀಗಿಸಲು ತಾತ್ಕಾಲಿಕವಾಗಿ ಹೊರಗುತ್ತಿಗೆಯಲ್ಲಿ ನೇಮಕ ಮಾಡಿಕೊಂಡು ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಚುರುಕುಗೊಳಿಸಬೇಕು ಎಂದರು.

ಈಗಾಗಲೇ ಆಡಳಿತಾತ್ಮಕ ಅನುಮೋದನೆ ದೊರೆತು 150 ಕೋಟಿರೂ. ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಾಣ ಮಾಡುವಾಗ ಆಧುನಿಕ ಮೂಲ ಸೌಕರ್ಯವನ್ನೊಳಗೊಂಡಂತೆ ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವಂತಹ ರೀತಿಯಲ್ಲಿ ನಿರ್ಮಾಣವನ್ನು ಗುಣಮಟ್ಟದೊಂದಿಗೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸ್ಮಾರ್ಟ್ ಸಿಟಿ ಯೊಜನೆಯಡಿ ಮಂಗಳಾ ಕ್ರೀಡಾಂಗಣದ ಉನ್ನತೀಕರಣ ಕಾಮಗಾರಿ, ಅಂತರಾಷ್ಟ್ರೀಯ ಮಟ್ಟದ ಈಜು ಕೊಳದ ನಿರ್ಮಾಣ ಸೇರಿದಂತೆ, ಉರ್ವದಲ್ಲಿ ಒಳಾಂಗಣ ಕ್ರೀಡಾಂಗಣದ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರದಲ್ಲಿಯೇ ಪೂರ್ಣಗೊಳಿಸುವ ಉಸ್ತುವಾರಿಯನ್ನು ಜಿಲ್ಲಾಧಿಕಾರಿಗಳು ಮಾಡಬೇಕೆಂದು ಸೂಚನೆ ನೀಡಿದರು.

ಯುವಜನರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯ ಕಲ್ಪಿಸಿ ಅವರುಗಳು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್‍ ರತ್ನಾಕರ್ ಹೆಗ್ಗಡೆ, ಅಪರ ಜಿಲ್ಲಾಧಿಕಾರಿ ಎಂ. ಜೆರೂಪಾ ಹಾಗೂ ಜಿಲ್ಲಾ ಸಮನ್ವಯಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.



Join Whatsapp