Home ಟಾಪ್ ಸುದ್ದಿಗಳು ಕಸಾಪ ಅಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನ

ಕಸಾಪ ಅಧ್ಯಕ್ಷರಿಗೆ ರಾಜ್ಯ ಸಚಿವ ದರ್ಜೆ ಸ್ಥಾನಮಾನ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇಲ್ಲಿಯವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ಯಾವುದೇ ಸರ್ಕಾರ ಸಚಿವರ ಸ್ಥಾನಮಾನವನ್ನು ನೀಡಿರಲಿಲ್ಲ. ಇದೇ ಮೊಟ್ಟಮೊದಲ ಬಾರಿಗೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಮೆ-ಗರಿಮೆ, ಇತಿಹಾಸವನ್ನು ಮನಗಂಡು, ನಾಡು-ನುಡಿಗೆ ಪರಿಷತ್ತು ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಪರಿಗಣಿಸಿ ಹಾಗೂ ಪರಿಷತ್ತಿನ ಚುನಾವಣೆ ಇತಿಹಾಸದಲ್ಲಿ ದಾಖಲೆಯನ್ನು ಸೃಷ್ಟಿಸಿದ ಮತ್ತು ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಗುರಿಯನ್ನಿಟ್ಟುಕೊಂಡು, ಅನೇಕ ಕ್ರಾಂತಿಕಾರಿ ಬದಲಾವಣೆಯ ಮುಖೇನ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿರುವ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ಕಾರ್ಯವೈಖರಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಕ್ಷಣದಿಂದ (03-08-2022) ಜಾರಿಗೆ ಬರುವಂತೆ ರಾಜ್ಯ ಸಚಿವರ ದರ್ಜೆಗೆ ಸಮನಾದ ಸ್ಥಾನಮಾನವನ್ನು ನೀಡಿ ಗೌರವಿಸಿರುವುದು ಅತ್ಯಂತ ಸಂತಸದಾಯಕ ವಿಷಯವಾಗಿದೆ ಎಂದು ಗೌರವ ಕಾರ್ಯದರ್ಶಿ ನೇ. ಭ. ರಾಮಲಿಂಗಶೆಟ್ಟಿ ತಿಳಿಸಿದ್ದಾರೆ.

ಸರ್ಕಾರ ರಾಜ್ಯ ಸಚಿವರ ದರ್ಜೆ ಸ್ಥಾನಮಾನದ ಗೌರವ ನೀಡಿರುವುದು ಸಾಹಿತ್ಯ ಪರಿಷತ್ತಿನ ಎಲ್ಲ ಸದಸ್ಯರಿಗೆ ಸಲ್ಲಿಸಿರುವ ಸನ್ಮಾನವಾಗಿದೆ. ಈ ಮೂಲಕ ಮಾನ್ಯ ಅಧ್ಯಕ್ಷರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಮೇಲೆ ಸರ್ಕಾರ ಇಟ್ಟಿರುವ ಭರವಸೆ, ವಿಶ್ವಾಸವನ್ನು ಕಾಪಾಡಿಕೊಂಡು ಹೋಗುವ ಹಾಗೂ ಇನ್ನೂ ಹೆಚ್ಚಿನ ಜವಾಬ್ದಾರಿಯನ್ನು ಹೊತ್ತುಕೊಂಡು ಕನ್ನಡ-ಕನ್ನಡಿಗ-ಕರ್ನಾಟಕ ಇವುಗಳ ಹಿತರಕ್ಷಣೆ ಮತ್ತು ಅಭಿವೃದ್ಧಿಗೆ ಕಟಿಬದ್ಧನಾಗಿರುತ್ತೇನೆ ಎಂಬ ಭಾವನೆಯನ್ನು ಈ ಸುಸದಂರ್ಭದಲ್ಲಿ ನಾಡೋಜ ಡಾ. ಮಹೇಶ ಜೋಶಿ ವ್ಯಕ್ತಪಡಿಸಿರುತ್ತಾರೆ.

Join Whatsapp
Exit mobile version