ಬೆಂಗಳೂರು: ಅರಣ್ಯ ಹಾಗೂ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ರಾಜ್ಯಾದ್ಯಂತ ಇಂದು ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ.
ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಸರ್ಕಾರ ಆದೇಶಿಸಿದೆ. ಇಂದು ನಡೆಯುವ ಶೋಕಾಚರಣೆ ಅವಧಿಯಲ್ಲಿ ಸರ್ಕಾರದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಮತ್ತು ರಾಷ್ಟ್ರಧ್ವಜ ಹಾರಿಸಲ್ಪಡುವ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿದೆ.
ಮಂಗಳವಾರ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಸಚಿವ ಉಮೇಶ್ ಕತ್ತಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕುಟುಂಬಸ್ಥರು ತಕ್ಷಣ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಚಿಕಿತ್ಸೆ ಫಲಿಸದೆ ರಾತ್ರಿ 11 ಗಂಟೆಗೆ ಮೃತಪಟ್ಟಿದ್ದಾರೆ.