ಬೆಂಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಕ್ಕೆ ನೀಡಿದ ಅನುದಾನವನ್ನು ಸರಿಯಾಗಿ ಬಳಸಿಕೊಂಡಿಲ್ಲ. ಹಾಗಾಗಿ 2020-21ನೇ ಸಾಲಿನಲ್ಲಿ ಅನುದಾನ ಕಡಿತಗೊಳಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ವಿಧಾನ ಪರಿಷತ್ ಗೆ ತಿಳಿಸಿದ್ದಾರೆ.
ಜೆಡಿಎಸ್ ಸದಸ್ಯ ಬಿ.ಎಂ.ಫಾರೂಕ್ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಉತ್ತರಿಸಿದ ಜೆ.ಸಿ.ಮಾಧುಸ್ವಾಮಿ, 2018-19, 2019-20ನೆ ಸಾಲಿನಲ್ಲಿ ಕೆಎಂಡಿಸಿಗೆ ನೀಡಿದ್ದ ಅನುದಾನ ಸಮರ್ಪಕವಾಗಿ ಬಳಕೆಯಾಗಿಲ್ಲ. ಈ ಹಿನ್ನೆಲೆಯಲ್ಲಿ 2020-21ನೇ ಸಾಲಿನಲ್ಲಿ ಅನುದಾನ ಕಡಿತಗೊಳಿಸಲಾಗಿದೆ. ಅನುದಾನ ಸಮರ್ಪಕವಾಗಿ ಬಳಸುವುದಾದರೆ ಹೆಚ್ಚಿನ ಅನುದಾನ ನೀಡಲು ಸರ್ಕಾರ ಸಿದ್ಧವಿದೆ. ಈ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಲ್ಪಸಂಖ್ಯಾತ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಕೇಳಿದ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಮಾಧುಸ್ವಾಮಿ, ನಿಗಮದಲ್ಲಿ ಹಲವು ಹುದ್ದೆಗಳು ಖಾಲಿ ಇವೆ. ನಿಗಮದ ಕಾರ್ಯಚಟುವಟಿಕೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.