ಕಲಬುರಗಿ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಸೂತ್ರ ಕಿತ್ತುಕೊಳ್ಳುತ್ತದೆ ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಚಿಕೆಯಾಗಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.
ಅಫಜಲಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಬುಧವಾರ ಮತಯಾಚನೆ ನಡೆಸಿ ಅವರು ಮಾತನಾಡಿದರು.
‘ದೇಶದಲ್ಲಿ 50 ವರ್ಷ ಆಡಳಿತ ನಡೆಸಿದ ಕಾಂಗ್ರೆಸ್ ಯಾವ ಮಹಿಳೆಯ ಮಾಂಗಲ್ಯ ಸೂತ್ರ ಕಿತ್ತುಕೊಂಡಿದೆ? ಮಹಿಳೆಯರಿಗಾಗಿ ಹಲವಾರು ಯೋಜನೆಗಳನ್ನು ತಂದಿದೆ ಹೊರತು ಮಾಂಗಲ್ಯ ಸೂತ್ರ ಕಿತ್ತುಕೊಳ್ಳುವ ಕೆಲಸ ಮಾಡಿಲ್ಲ’ ಎಂದರು. ‘ಸಿಕ್ಕ ಅಧಿಕಾರವನ್ನು ಜನರ ಹಿತಕ್ಕಾಗಿ ಬಳಸಿಕೊಳ್ಳಬೇಕು. ಆದರೆ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸೇರಿಕೊಂಡು ದೇಶವನ್ನು ಮಾರುತ್ತಿದ್ದಾರೆ. ಅತ್ತ ಅಂಬಾನಿ ಮತ್ತು ಅದಾನಿ ಇಬ್ಬರೂ ಖರೀದಿ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.