ಮಂಕಿಪಾಕ್ಸ್ ಆತಂಕ: ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಲು ದಿನೇಶ್ ಗುಂಡೂರಾವ್ ಸೂಚನೆ

Prasthutha|

ಬೆಂಗಳೂರು: ದೇಶದಲ್ಲಿ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿಲ್ಲ. ಒಂದು ವೇಳೆ ಪತ್ತೆಯಾದರೆ ಅದಕ್ಕೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಸ್ಪತ್ರೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಆಸ್ಪತ್ರೆಗಳಲ್ಲಿ ವೈದ್ಯರಿಗೆ ತರಬೇತಿ ನೀಡಬೇಕು. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೇಲೆ ನಿಗಾ ಇರಿಸಬೇಕು. ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

- Advertisement -

ಹೊರದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮುಂಜಾಗೃತಾ ಕ್ರಮಗಳ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಆರೋಗ್ಯ ತುರ್ತುಸ್ಥಿತಿ ಘೋಷಿಸುವ ಪರಿಸ್ಥಿತಿ ಇಲ್ಲ. ಆದರೆ, ಹೊರ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಸ್ಥಿತಿ ಘೋಷಿಸಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ರಾಜ್ಯದಲ್ಲಿ ಈಗಿನಿಂದಲೇ ಮುಂಜಾಗ್ರತೆ ವಹಿಸಬೇಕು. ಮಂಕಿಪಾಕ್ಸ್ ವೈರಾಣು ಗುಣಲಕ್ಷಣಗಳು ಕಂಡು ಬಂದರೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಒಂಬತ್ತು ಝೀಕಾ ಪ್ರಕರಣಗಳು ಪತ್ತೆಯಾಗಿದ್ದು, ಶಿವಮೊಗ್ಗದಲ್ಲಿ ಮೂರು ಹಾಗೂ ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಆರು ಮಂದಿಗೆ ಝೀಕಾ ವೈರಾಣು ಸೋಂಕು ದೃಢಪಟ್ಟಿದೆ. ಈ ಪೈಕಿ ಐವರು ಮಹಿಳೆಯರಿಗೆ ಸೋಂಕು ತಗುಲಿದ್ದು, ಇವರ ಸಂಪರ್ಕಕ್ಕೆ ಬಂದವರ ತಪಾಸಣೆ ನಡೆಸಬೇಕು ಎಂದು ಸಚಿವರು ನಿರ್ದೇಶನ ನೀಡಿದ್ದಾರೆ.

- Advertisement -

ಸಭೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಪ್ರಾದೇಶಿಕ ನಿರ್ದೇಶಕರು ಪಾಲ್ಗೊಂಡಿದ್ದರು.



Join Whatsapp