ಬೆಂಗಳೂರು: ರವಿವಾರ ಕೇರಳದಲ್ಲಿ ಮುಂಗಾರು ಪ್ರವೇಶವಾಗಿದ್ದು, ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂ. 3ರಂದು ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರವಿವಾರ ಕೇರಳದ 14 ಜಿಲ್ಲೆಗಳಿಗೆ ಮುಂಗಾರು ಪ್ರವೇಶವಾಗಿದೆ. ಇದನ್ನು ಆಧರಿಸಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಸಾಧ್ಯತೆಯನ್ನು ನಿರ್ಧರಿಸಲಾಗುತ್ತದೆ.
ಅದರಂತೆ ಈ ಬಾರಿ ಜೂ. 2ರ ರಾತ್ರಿ ಅಥವಾ ಜೂ. 3ರಂದು ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳು, ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.