ಆಯ್ಕೆಯಾಗಿರುವ 13 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲೇ ಸೇವೆಗೆ ಸೇರ್ಪಡೆ: ಸಚಿವ ಬಿ.ಸಿ.ನಾಗೇಶ್

Prasthutha|

ಮಡಿಕೇರಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಸಕಾಲ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ಅವರು ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದರು.

- Advertisement -


ಬಳಿಕ ಜಿಲ್ಲೆಯ ಜನತೆಗೆ ಸಂದೇಶ ನೀಡಿದ ಅವರು, ಪ್ರಕೃತಿ ಸೊಬಗಿನ ತಾಣ, ಸಸ್ಯಕಾಶಿ, ಧಾರ್ಮಿಕ ಕ್ಷೇತ್ರ, ಕಾವೇರಿ ಉಗಮ ತಾಣ, ವೀರ ಸೇನಾನಿಗಳ ನಾಡು, ಕಾಫಿ ನಾಡು ಹೀಗೆ ಹಲವು ಹೆಸರುಗಳಿಂದ ಕರೆಯಲ್ಪಡುವ ಕೊಡಗು ಜಿಲ್ಲೆ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿದೆ. ಇಂತಹ ಜಿಲ್ಲೆಯ ಪ್ರಕೃತಿ ಸೌಂದರ್ಯದ ನಡುವೆ ಧ್ವಜಾರೋಹಣ ನೆರವೇರಿಸಲು ನನಗೆ ಹೆಮ್ಮೆಯೆನಿಸುತ್ತದೆ ಎಂದರು.
ಕೊಡಗು ಜಿಲ್ಲೆಯ 12 ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿಗಳೆಂದು ಗುರುತಿಸಿ ಅಭಿವೃದ್ಧಿಪಡಿಸಲಾಗುತ್ತಿದೆ. ವಸತಿ ರಹಿತ ಮತ್ತು ಆಶ್ರಯ ರಹಿತರನ್ನು ಗುರುತಿಸಿ ಎಲ್ಲರಿಗೂ ವಸತಿ ಕಲ್ಪಿಸಲು, ಜಿಲ್ಲೆಯಲ್ಲಿ ಅಮೃತ ಗ್ರಾಮೀಣ ವಸತಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ರೈತರು, ನೇಕಾರರು ಮತ್ತು ಮೀನುಗಾರರ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟವನ್ನು ಉತ್ತೇಜಿಸಲು ಅಮೃತ ರೈತ ಉತ್ಪಾದಕ ಸಂಸ್ಥೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಸಂಸ್ಥೆಗಳಿಗೆ ತಲಾ 30 ಲಕ್ಷದಂತೆ ಮೂರು ವರ್ಷದ ಅವಧಿಯಲ್ಲಿ ಅನುದಾನ ನೀಡಲಾಗುತ್ತದೆ ಎಂದರು.
ಶಾಲಾ, ಕಾಲೇಜುಗಳನ್ನು ಗುರುತಿಸಿ, ಅಲ್ಲಿನ ವಿದ್ಯಾರ್ಥಿಗಳನ್ನು ಸಮುದಾಯ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲು ಅಮೃತ ಸಮುದಾಯ ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗುತ್ತಿದೆ. ಪ್ರಸ್ತುತ ಸರ್ಕಾರ ಕೊಡಗು ಜಿಲ್ಲೆಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಕುಶಾಲನಗರದ ಚಿಕ್ಕ ಅಳುವಾರದಲ್ಲಿ ಪ್ರತ್ಯೇಕ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಅನುಮೋದನೆ ದೊರೆಕಿದೆ ಎಂದು ಪ್ರಕಟಿಸಿದರು.


39.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಜಿಲ್ಲಾ ನ್ಯಾಯಾಲಯ ಕಟ್ಟಡ ಉದ್ಘಾಟಿಸಲಾಗಿದೆ. ಗಣರಾಜ್ಯೋತ್ಸವದ ಈ ಶುಭ ದಿನದಂದು 96 ಲಕ್ಷ ರೂ. ವೆಚ್ಚದಲ್ಲಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೊಠಡಿಗಳ ಉದ್ಘಾಟನೆ ಮಾಡಲಾಗುತ್ತಿದೆ. 198 ಲಕ್ಷ ರೂ.ವೆಚ್ಚದಲ್ಲಿ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ 100 ಕೋಟಿ ವೆಚ್ಚದಲ್ಲಿ 450 ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ಕಟ್ಟಡ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿದೆ ಎಂದರು.

- Advertisement -


5 ಕೋಟಿ ವೆಚ್ಚದಲ್ಲಿ ಮಿನಿ ತಾರಾಲಯ ಮತ್ತು 4 ಕೋಟಿ ವೆಚ್ಚದಲ್ಲಿ ಕೊಡಗು ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ನಿರ್ಮಾಣ ಸಂಬಂಧ ನಗರದ ಹೊರ ವಲಯದಲ್ಲಿ ಜಾಗ ಗುರುತಿಸಲಾಗಿದ್ದು, ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ.

ಗಾಂಧಿ ಮಂಟಪದಲ್ಲಿ 30 ಸೆಂಟ್ ಜಾಗದಲ್ಲಿ ಮಹಾತ್ಮ ಗಾಂಧೀಜಿ ಉದ್ಯಾನವನ ನಿರ್ಮಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸದ್ಯದಲ್ಲಿಯೇ ಚಾಲನೆ ದೊರೆಯಲಿದೆ ಮುಖ್ಯಮಂತ್ರಿ ರೈತ ವಿದ್ಯಾ ನಿಧಿ ಯೋಜನೆಯಡಿ ಇದುವರೆಗೆ 5,189 ವಿದ್ಯಾರ್ಥಿಗಳಿಗೆ ಒಟ್ಟು 209.98 ಲಕ್ಷ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದಿಂದ ಜಿಲ್ಲೆಗೊಂದು ಗೋಶಾಲೆ ತೆರೆಯುವ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಗೆ 1 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಈಗಾಗಲೇ ಜಿಲ್ಲೆಯ ಕೆ. ನಿಡುಗಣೆ ಗ್ರಾಮದಲ್ಲಿ ಗೋಶಾಲೆ ಕಾರ್ಯನಿರ್ವಹಿಸುತ್ತಿದೆ. ಸೋಮವಾರಪೇಟೆ ತಾಲೂಕಿನ ನಾಗಾವರದಲ್ಲಿ ಮತ್ತೊಂದು ಗೋಶಾಲೆಯನ್ನು ಪ್ರಾರಂಭಿಸಲು ಜಾಗ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.


ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ವವದ ಸವಿನೆನಪಿಗಾಗಿ ಅಮೃತ ಶಾಲಾ ಸೌಲಭ್ಯ ಯೋಜನೆಯಡಿ 16 ಶಾಲೆಗಳ ದುರಸ್ತಿ ಮತ್ತು ನವೀಕರಣಕ್ಕೆ 1.60 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಒಟ್ಟು 104 ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳನ್ನು ರಚಿಸಲಾಗಿದ್ದು, 439 ವಾರ್ಡ್ ಮಟ್ಟದ ಒಕ್ಕೂಟಗಳು ಮತ್ತು 2,971 ಸ್ವಸಹಾಯ ಗುಂಪುಗಳನ್ನು ಒಳಗೊಂಡಿದೆ. ಸಮುದಾಯ ಬಂಡವಾಳ ನಿಧಿಗೆ ಸಂಬಂಧಿಸಿದಂತೆ 104 ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳಿಗೆ 1064.50 ಲಕ್ಷ ಹಾಗೂ 99 ಸ್ವಸಹಾಯ ಗುಂಪುಗಳಿಗೆ 14.85 ಲಕ್ಷ ಸುತ್ತು ನಿಧಿಯನ್ನು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಉಳಿತಾಯ ಖಾತೆಗೆ ಬಿಡುಗಡೆ ಮಾಡಲಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಜೇನುಕುರುಬ ಜನಾಂಗದ 485 ಫಲಾನುಭವಿಗಳಿಗೆ ಮನೆ ನಿರ್ಮಿಸಲು ತಲಾ 3.50 ಲಕ್ಷದಂತೆ ಒಟ್ಟು 1,697.50 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ತೋಟಗಾರಿಕಾ ಇಲಾಖಾ ವ್ಯಾಪ್ತಿಯಲ್ಲಿ ಹಲವು ಯೋಜನೆಗಳಿಗೆ ಒಟ್ಟು 461.91 ಲಕ್ಷ ಅನುದಾನ ನಿಗದಿಯಾಗಿದ್ದು, ಕಾರ್ಯಕ್ರಮ ಪ್ರಗತಿಯಲ್ಲಿದೆ. ತೋಟಗಾರಿಕೆ ಇಲಾಖೆ ನರ್ಸರಿಗಳಲ್ಲಿ 10 ಲಕ್ಷ ಕಾಳು ಮೆಣಸು, ಕಿತ್ತಳೆ, ಅಡಿಕೆ, ತೆಂಗು ನರ್ಸರಿ ಗಿಡಗಳನ್ನು ಬೆಳೆಸಿ ರೈತರಿಗೆ ವಿತರಿಸಲಾಗುತ್ತಿದೆ ಎಂದು ನಾಗೇಶ್ ಹೇಳಿದರು.


ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆಗಾಗಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದ್ದು, ಆಯ್ಕೆಯಾಗಿರುವ 13 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲೇ ಸೇವೆಗೆ ಸೇರ್ಪಡೆಗೊಳಿಸುವ ಗುರಿ ಹೊಂದಲಾಗಿದೆ. ವಿವೇಕ ಯೋಜನೆಯಡಿ 6,601 ಕೊಠಡಿಗಳು ಸೇರಿದಂತೆ ಶಾಲಾ-ಕಾಲೇಜುಗಳಲ್ಲಿ ಒಟ್ಟು 9 ಸಾವಿರ ಕೊಠಡಿ ನಿರ್ಮಿಸಲಾಗುತ್ತಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಉಂಟಾಗಿರುವ ಕಲಿಕಾ ಹಿನ್ನಡೆ ಸರಿದೂಗಿಸಲು ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಿರುವ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೂ ‘ಕಲಿಕಾ ಚೇತರಿಕೆ 2.0’ ರೂಪದಲ್ಲಿ ಅನುಷ್ಠಾನಗೊಳಿಸುವ ಉದ್ದೇಶವಿದೆ ಎಂದು ಸಚಿವರು ತಿಳಿಸಿದರು.
ಕಲೆ ಕ್ಷೇತ್ರದಲ್ಲಿ ‘ಪದ್ಮಶ್ರೀ’ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ‘ರಾಣಿ ಮಾಚಯ್ಯ’ ಅವರನ್ನು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಿ.ಸಿ.ನಾಗೇಶ್ ಅವರು ಸನ್ಮಾನಿಸಿ ಗೌರವಿಸಿದರು.



Join Whatsapp