ಐದಕ್ಕಿಂತ ಹೆಚ್ಚಿನ ಪ್ರಕರಣ ವರದಿಯಾದ ಶಾಲೆ, ಕಾಲೇಜುಗಳಲ್ಲಿ ಭೌತಿಕ ತರಗತಿ ಬಂದ್: ದ.ಕ. ಜಿಲ್ಲಾಧಿಕಾರಿ

Prasthutha|

ಮಂಗಳೂರು: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್-19 ಸೋಂಕಿನ ಸ್ಥಿತಿ-ಗತಿಗಳ ಬಗ್ಗೆ ಶಿಕ್ಷಣ, ಆರೋಗ್ಯ ಇಲಾಖೆ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲಕರು ಹಾಗೂ ಪ್ರತಿನಿಧಿಗಳ ಸಭೆ ನಡೆಯಿತು.

- Advertisement -

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಮಾಣದ ಹಿನ್ನೆಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಹಾಗೂ ಅಲ್ಲಿನ ಮುಖ್ಯಸ್ಥರು ಅತ್ಯಂತ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು, ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಪಾತ್ರ ಅತ್ಯಂತ ಜವಬ್ದಾರಿಯುತದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ಇಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತದೊಂದಿಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಕೈಜೋಡಿಸಬೇಕು, ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೂ, ಪರಿಸ್ಥಿತಿ ಅಷ್ಟು ಗಂಭೀರವಾಗಿಲ್ಲ, ಆದ ಕಾರಣ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವ ಅಥವಾ ಭೌತಿಕ ತರಗತಿಗಳನ್ನು ರದ್ದುಗೊಳಿಸುವ ಅಗತ್ಯವಿಲ್ಲವೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾದ ಹಿನ್ನಲೆಯಲ್ಲಿ ಮುಂದಿನ ಒಂದು ವಾರ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

- Advertisement -

ಕೈಗೊಳ್ಳಬೇಕಾದ ಕ್ರಮಗಳು ಇಂತಿವೆ:

  1. ಶಾಲಾ-ಕಾಲೇಜುಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಕೋವಿಡ್ ಸುರಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು.
  2. ಶೈಕ್ಷಣಿಕ ತರಗತಿಗಳನ್ನು ಹೊರತುಪಡಿಸಿ ಯಾವುದೇ ಸಾಂಸ್ಕೃತಿಕ, ಕ್ರೀಡಾ ಮತ್ತಿತರ ಸಮೂಹ ಚಟುವಟಿಕೆಗಳಿಗೆ ಮುಂದಿನ ಆದೇಶದ ವರೆಗೆ ಅವಕಾಶವಿಲ್ಲ.
  3. ಐದು ಅದಕ್ಕಿಂತ ಹೆಚ್ಚಿನ ಕೋವಿಡ್ ಪಾಸಿಟಿವ್ ಪ್ರಕರಣಗಳು ಬಂದ ಸಂದರ್ಭದಲ್ಲಿ ಅಂತಹ ಶಾಲೆ ಅಥವಾ ಕಾಲೇಜುಗಳಲ್ಲಿ ಭೌತಿಕ ತರಗತಿಗಳನ್ನು ರದ್ದು ಪಡಿಸಿ ಆನ್ಲೈನ್ ತರಗತಿಗಳನ್ನು ನಡೆಸುವುದು.
  4. ಕೋವಿಡ್ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಹಾಸ್ಟೆಲುಗಳಲ್ಲಿ ಅಥವಾ ಮನಗಳಲ್ಲಿ ಐಸೋಲೇಶನ್ಗೆ ಒಳಪಡಿಸುವುದು.
  5. ಎಂಟರಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಶೇಕಡ 100 ವ್ಯಾಕ್ಸಿನೇಷನ್ ಗುರಿ ತಲುಪಲು ಯತ್ನಿಸುವುದು.
  6. ಶಾಲೆಗಳಲ್ಲಿ ಕಡ್ಡಾಯವಾಗಿ ಹೆತ್ತವರ ಮತ್ತು ಶಿಕ್ಷಕರ ಸಭೆಯನ್ನು ಕರೆದು ಭೌತಿಕ ಅಥವಾ ಆನ್ ಲೈನ್ ಕ್ಲಾಸ್ ಗಳ ಬಗ್ಗೆ ಅವರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಬೇಕು.
  7. ಶಾಲೆಗಳಲ್ಲಿ ಭೌತಿಕ ತರಗತಿಗಳಿಗೆ ಹಾಜರಾಗಲು ಸಿದ್ಧರಿಲ್ಲದ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳಿಗೆ ಕಡ್ಡಾಯವಾಗಿ ವ್ಯವಸ್ಥೆ ಮಾಡಬೇಕು ಮತ್ತು ಅವಕಾಶ ಕಲ್ಪಿಸಿಕೊಡಬೇಕು.
  8. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಆನ್ ಲೈನ್ ಕ್ಲಾಸುಗಳ ಬಗ್ಗೆ ದೂರುಗಳನ್ನು ಸಲ್ಲಿಸಲು ಮಕ್ಕಳ ಪೋಷಕರಿಗೆ ಅನುಕೂಲವಾಗುವಂತೆ ಸಹಾಯವಾಣಿ ಸಂಖ್ಯೆಯನ್ನು ತಕ್ಷಣದಿಂದಲೇ ಪ್ರಾರಂಭಿಸಬೇಕು.
  9. ಅಂತಾರಾಜ್ಯ ವಿದ್ಯಾರ್ಥಿಗಳು ಹೆಚ್ಚಿರುವ ಕಾಲೇಜುಗಳಲ್ಲಿ ಮತ್ತು ಪಕ್ಕದ ರಾಜ್ಯದಿಂದ ದಿನನಿತ್ಯ ಪ್ರಯಾಣಿಸುವ ವಿದ್ಯಾರ್ಥಿಗಳು ಹೆಚ್ಚಿರುವ ಶಾಲೆ ಕಾಲೇಜುಗಳಲ್ಲಿ ಕೋವಿಡ್ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ನಿಗಾ ವಹಿಸುವಂತ ಸೂಚಿಸಲಾಯಿತು.
  10. ಕೆಲವು ಸ್ವಾಯತ್ತ ವಿದ್ಯಾಸಂಸ್ಥೆಗಳು ತಮ್ಮ ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿ ಭೌತಿಕ ತರಗತಿಗಳನ್ನು ರದ್ದುಪಡಿಸಿ ಆನ್ಲೈನ್ ತರಗತಿಗಳನ್ನು ನಡೆಸುತ್ತಿರುವುದನ್ನು ಗಮನಿಸಲಾಗಿದ್ದು, ಅದನ್ನು ಅಗತ್ಯವಿರುವಷ್ಟು ದಿನ ಮುಂದುವರಿಸುವಂತೆ ಸೂಚಿಸಲಾಯಿತು.
  11. ಇದೇ ಜ.24ರಂದು ಮತ್ತೋಮ್ಮೆ ಸಭೆ ಸೇರಿ ಪರಿಸ್ಥಿತಿಯ ಅವಲೋಕನ ನಡೆಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.
    ಸಭೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಧಾಕರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿದ್ದರು.


Join Whatsapp