ಬೆಳಗಾವಿ: ರಾಜ್ಯದಲ್ಲಿ ಡೆಂಘೀ ಪ್ರಕರಣ ಹೆಚ್ಚಾಗಿವೆ. ಈ ಹಿನ್ನೆಲೆಯಲ್ಲಿ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು. ಆದರೆ, ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಅವರು ಆ ಪರಿಸ್ಥಿತಿ ಬಂದಿಲ್ಲ ಎಂದು ಹೇಳುತ್ತಿದ್ದಾರೆ. ಸರ್ಕಾರ ಜನರ ಜೀವದ ಜೊತೆ ಆಟವಾಡುತ್ತಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಡೆಂಗ್ಯೂ, ಚಿಕೂನ್ ಗುನ್ಯಾ ಸಾಂಕ್ರಾಮಿಕ ರೋಗ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಸದ ಜಗದೀಶ ಶೆಟ್ಟರ್, ಬಿಜೆಪಿ ಗ್ರಾಮೀಣ ಅಧ್ಯಕ್ಷ ಸುಭಾಷ ಪಾಟೀಲ, ಮಾಜಿ ಶಾಸಕ ಸಂಜಯ ಪಾಟೀಲ ಅವರು ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಕಾರ್ಯಚಟುವಟಿಕೆ ಪರಿಶೀಲಿಸಿದರು. ಡೆಂಘೀ ಪೀಡಿತ ರೋಗಿಗಳೊಂದಿಗೆ ಮಾತನಾಡಿದ ಅವರು, ಆಸ್ಪತ್ರೆ ವ್ಯವಸ್ಥೆಯ ಕುರಿತು ಮಾಹಿತಿ ಪಡೆದುಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಶೆಟ್ಟರ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳು ಜನರ ಬಳಿಗೆ ಹೋಗಿ ಸಮಸ್ಯೆ ಆಲಿಸುವಂತೆ ಸೂಚನೆ ನೀಡಿದ್ದರೂ ಆಡಳಿತ ಸರಿಯಾಗಿ ನಡೆಯುತ್ತಿಲ್ಲ ಎಂಬುದು ಸಾಬೀತಾಗಿದೆ ಎಂದು ದೂರಿದರು.
ರಾಜ್ಯಾದ್ಯಂತ ಡೆಂಘೀ ಪ್ರಕರಣ ಹೆಚ್ಚಾಗುತ್ತಿವೆ. ಆದರೆ, ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ, ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ 189 ಪ್ರಕರಣ ಆಡ್ಮಿಟ್ ಆಗಿವೆ. ಡಿಎಚ್ಒ ಅವರು 177 ಕೇಸ್ ಬಂದಿವೆ ಎಂಬ ಮಾಹಿತಿ ನೀಡಿದ್ದಾರೆ. ಜೂನ್, ಜುಲೈ ತಿಂಗಳಲ್ಲಿ ಪ್ರಕರಣ ಹೆಚ್ಚಾಗಿವೆ. ಇದೇ ವಾರದಲ್ಲಿ 48 ಪ್ರಕರಣ ಹೆಚ್ಚಾಗಿವೆ. ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡುವಂತೆ ಸೂಚನೆ ನೀಡಿದ್ದೇನೆ. ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ಮಾಹಿತಿ ಪಡೆದುಕೊಳ್ಳಬೇಕು. ಸ್ಥಳೀಯ ಸಂಸ್ಥೆ ಅಧಿಕಾರಿಗಳು ಹಾಗೂ ಜನರು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.