ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟು ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತವಾಗಿದ್ದು, ನಾಳೆ(ಸೆಪ್ಟೆಂಬರ್ 24) ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ.
ಈಗಾಗಲೇ ಎರಡು ಕಡೆಯ ವಾದವನ್ನು ಆಲಿಸಿ ವಿಚಾರಣೆ ಮುಕ್ತಾಯಗೊಳಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಾಳೆ (ಮಂಗಳವಾರ) ಮಧ್ಯಾಹ್ನ 12 ಗಂಟೆಗೆ ತೀರ್ಪು ಪ್ರಕಟಿಸಲಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಭವಿಷ್ಯ ಏನಾಗಲಿದೆ ಎನ್ನುವ ಕುತೂಹಲ ಮೂಡಿಸಿದ್ದು, ಎಲ್ಲರ ಚಿತ್ತ ಹೈಕೋರ್ಟ್ನತ್ತ ನೆಟ್ಟಿದೆ.