Home ರಾಜ್ಯ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು: ಯಡಿಯೂರಪ್ಪ

ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು: ಯಡಿಯೂರಪ್ಪ

ಬೆಂಗಳೂರು: “ಲೋಕಾಯುಕ್ತದಲ್ಲಿ ನಡೆಯುತ್ತಿರುವ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.


ಚನ್ನಪಟ್ಟಣ ಉಪಚುನಾವಣೆಯ ಪ್ರಚಾರಕ್ಕೆ ತೆರಳುವ ಮುನ್ನ ತಮ್ಮ ಡಾಲರ್ಸ್ ಕಾಲೊನಿಯ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಾಯುಕ್ತ ವಿಚಾರಣೆಗೆ ಒಳಪಟ್ಟಿದ್ದಾರೆ. ಲೋಕಾಯುಕ್ತ ತನಿಖೆಯಿಂದ ಏನೂ ಆಗಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹಾಗಾಗಿ, ಮುಖ್ಯಮಂತ್ರಿಗಳು ತಾವು ಸಾಚಾ ಎಂಬುದನ್ನು ಬಿಂಬಿಸಿಕೊಳ್ಳಲು ವಿಚಾರಣೆಗೆ ಹಾಜರಾಗಿ ದೊಂಬರಾಟ ನಡೆಸಿದ್ದಾರೆ ಅಷ್ಟೇ” ಎಂದು ಟೀಕಿಸಿದರು.


“ಮುಡಾ ಹಗರಣದ ಸತ್ಯಾಸತ್ಯತೆ ಹೊರಬರಬೇಕು ಎಂದರೆ ಸಿಬಿಐ ತನಿಖೆ ಆಗಲೇಬೇಕು ಎಂದು ಎಲ್ಲರೂ ಹೇಳುತ್ತಿದ್ದಾರೆ. ನಾನು ಸಿಬಿಐ ತನಿಖೆಗೆ ಆಗ್ರಹಿಸುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ರಾಜಕೀಯ ಜೀವನ ತೆರೆದ ಪುಸ್ತಕ ಎಂದೆಲ್ಲ ಹೇಳುತ್ತಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ, ಮುಡಾ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕು ಎನ್ನುವ ಆಶಯ ಇದ್ದರೆ ಕೂಡಲೇ ಸಿಬಿಐ ತನಿಖೆಗೆ ಆದೇಶಿಸಲಿ” ಎಂದರು.

Join Whatsapp
Exit mobile version