Home ಟಾಪ್ ಸುದ್ದಿಗಳು ಮುಡಾ ಸಂಕಷ್ಟ: ಸಿದ್ದರಾಮಯ್ಯ ಪತ್ನಿ, ಭಾವ ಇತರರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ!

ಮುಡಾ ಸಂಕಷ್ಟ: ಸಿದ್ದರಾಮಯ್ಯ ಪತ್ನಿ, ಭಾವ ಇತರರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ!

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ.


ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಮಾತ್ರವಲ್ಲದೇ ಅವರ ಭಾವ ಮಲ್ಲಿಕಾರ್ಜುನ ಸ್ವಾಮಿ, ಕೇಂದ್ರ ಸರ್ಕಾರ, ಕೇಂದ್ರ ತನಿಖಾ ದಳ (ಸಿಬಿಐ), ರಾಜ್ಯ ಸರ್ಕಾರ, ರಾಜ್ಯ ಪೊಲೀಸ್ ಮುಖ್ಯಸ್ಥರು, ಲೋಕಾಯುಕ್ತ ಪೊಲೀಸರು ಮತ್ತು ಇತರರಿಗೆ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.


ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣದ ಸ್ವತಂತ್ರ, ನ್ಯಾಯಸಮ್ಮತ, ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗಾಗಿ ಲೋಕಾಯುಕ್ತ ಪೊಲೀಸರಿಂದ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ನಿರ್ದೇಶನ ನೀಡುವಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಹೈಕೋರ್ಟ್ ಈ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.


ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಅವರಿಗೆ ಮುಡಾದಿಂದ 14 ಪರಿಹಾರ ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಆಕ್ಷೇಪಣೆಗಳಿದ್ದರೆ ಸಲ್ಲಿಸುವಂತೆ ಎಲ್ಲ ಪ್ರತಿವಾದಿಗಳಿಗೆ ಸೂಚಿಸಿದ ನ್ಯಾಯಾಲಯ, ಮುಂದಿನ ವಿಚಾರಣೆಯ ದಿನಾಂಕವಾದ ನವೆಂಬರ್ 26 ರೊಳಗೆ ತನಿಖೆಯ ವಿವರಗಳನ್ನು ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ.

Join Whatsapp
Exit mobile version