ಮಂಗಳೂರು : ಮುಲ್ಕಿ ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹೆಸರಿನಲ್ಲಿ ಕೋವಿಡ್ ರೋಗಿಗಳಿಗೆ ಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸಿದ್ದು, ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ಕಾಂಗ್ರೆಸ್ ಮುಖಂಡ ಮಿಥುನ್ ರೈ ಉಚಿತ ಅಂಬ್ಯುಲೆನ್ಸ್ ಸೇವೆಗೆ ಚಾಲನೆ ನೀಡಿದ್ದಾರೆ.
ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ. ಸಂಕಷ್ಟದ ಸಮಯದಲ್ಲಿ ಜನರಿಗೆ ಸಹಾಯವಾಗುವ ನಿಟ್ಟಿನಲ್ಲಿ ಉಚಿತ ಅಂಬ್ಯುಲೆನ್ಸ್ ಸೇವೆ ನೀಡಲಾಗುತ್ತಿದೆ. ಈಗಾಗಲೇ ಮೂಡಬಿದ್ರೆ ಹಾಗೂ ಮುಲ್ಕಿ ಕಾಂಗ್ರೆಸ್ ಕಚೇರಿಯಲ್ಲಿ ಕೋವಿಡ್ ಸಹಾಯವಾಣಿ ತೆರೆಯಲಾಗಿದೆ ಎಂದು ಅವರು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈಗಾಗಲೇ ಮೂಡಬಿದ್ರೆ ವ್ಯಾಪ್ತಿಯಲ್ಲಿ ವಾಹನದ ಮೂಲಕ ಜಾಗೃತಿ ಮೂಡಿಸುವ ಕೆಲಸವಾಗುತ್ತಿದೆ. ಇನ್ನು ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು, ಕೋವಿಡ್ ರೋಗಿಗಳಿಗೆ ಯಾವುದೇ ಸಮಸ್ಯೆ ಆಗದ ರೀತಿಯಲ್ಲಿ ಮುತುವರ್ಜಿ ವಹಿಸಿಕೊಳ್ಳಬೇಕೆಂದು ಮನವಿ ಮಾಡಿಕೊಂಡರು. ಈ ವೇಳೆ ಕಾಂಗ್ರೆಸ್ ಮುಖಂಡರಾದ ಸಂತೋಷ್ ಶೆಟ್ಟಿ, ಪುರಂದರ್ ದೇವಾಡಿಗ, ರಾಜೇಶ್, ಧನರಾಜ್ ಪ್ರವೀಣ್ ಕುಮಾರ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.