ಮುಂಬೈ: ಕ್ಲಬ್ ಹೌಸ್ ಆ್ಯಪ್ ನಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅಶ್ಲೀಲ ಕಮೆಂಟ್ ಗಳನ್ನು ಹಾಕಿದ ಆರೋಪದಲ್ಲಿ ಮುಂಬೈ ಪೊಲೀಸರು ಹರ್ಯಾಣದ ಮೂವರನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರು ನೀಡಿದ ದೂರಿನ ಆಧಾರದಲ್ಲಿ ಸೈಬರ್ ಸೆಲ್ ಅಧಿಕಾರಿಗಳು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 153 ಎ, 295 ಎ, 354 ಎ, 354 ಡಿ, ಐಟಿ ಕಾಯ್ದೆ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಮುಂಬೈ ಅಫರಾಧ ವಿಭಾಗದ ಸೈಬರ್ ಪೊಲೀಸ್ ಠಾಣೆಯ ಸಿಬ್ಬಂದಿ ಈ ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಯ ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದೆಂದು ಹಿರಿಯ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಶಿವಸೇನಾ ರಾಜ್ಯಸಭಾ ಸದಸ್ಯೆ ಪ್ರಿಯಾಂಕಾ ಚತುರ್ವೇದಿ, ಪ್ರಕರಣವನ್ನು ಭೇದಿಸಿರುವ ಪೊಲೀಸರ ನಡೆಯನ್ನು ಶ್ಲಾಘಿಸಿದ್ದಾರೆ.